ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಮತ್ತು ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಮತ್ತು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಸಿದ್ದರಾಮಯ್ಯ ಎಲ್ಲಾ ಸಮುದಾಯದ ಬಡವರು, ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದವರಿಗೆ ಅನುಕೂಲ ಕಲ್ಪಿಸಿದ್ದು ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಹೇಳಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜನರ ನಡುವೆ ಒಬ್ಬ ರಾಜಕಾರಣಿ 75 ವರ್ಷಗಳ ಕಾಲ ಇರುವುದು ಸುಲಭದ ಮಾತಲ್ಲ. ಸಿದ್ದರಾಮಯ್ಯ ಹುಟ್ಟುಹಬ್ಬದ ನೆನಪಿನಲ್ಲಿ ಅವರ ಬದುಕನ್ನು ಮುಂದಿನ ಪೀಳಿಗೆಗೆ ಮುಟ್ಟಿಸುವ ಉದ್ದೇಶ ಈ ಕಾರ್ಯಕ್ರಮದ ಹಿಂದೆ ಇದೆ ಎಂದರು.
ರಾಜಕೀಯದಲ್ಲಿ ಅವರು ಅನುಭವಿಸಿದ ಕಷ್ಟ ಮತ್ತು ಹೋರಾಠದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆಯೇ ಹೊರತು ವಿರೋಧ ಪಕ್ಷಗಳು ಹೇಳುವಂತೆ ಸಿದ್ದರಾಮೋತ್ಸವ ಅಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ನೀಡಿರುವ ಕೊಡುಗೆ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದು ಪಕ್ಷವೇ ಹೊರತು ಡೋಂಗಿ ದೇಶಪ್ರೇಮಿಗಳಲ್ಲ ಎನ್ನುವುದನ್ನು ನೆನಪಿಸಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 75 ಕಿಲೋ ಮೀಟರ್ ಪಾದಯಾತ್ರೆ ಮಾಡುತ್ತೇವೆ. ಆಗಸ್ಟ್ 15ರಂದು ಬೆಂಗಳೂರಿನಲ್ಲಿ ಬೃಹತ್ ಪಾದಯಾತ್ರೆ ನಡೆಸಲು ಯೋಜನೆ ರೂಪಿಸಿದೆ ಎಂದು ವಿವರಿಸಿದರು.
ಮಾಧ್ಯಮಗೋಷ್ಠಿಯಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ರಘುಮೂರ್ತಿ, ಮಾಜಿ ಶಾಸಕ ರಫೀಕ್ ಅಹಮದ್, ಸಾ.ಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.