ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಉತ್ತರ ಕನ್ನಡ ಜಿಲ್ಲಾ ಘಟಕ ಕೊಡಮಾಡುವ 2022ರ ಸಾಲಿನ ರಾಜ್ಯ ಮಟ್ಟದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ಮನಮೋಹನ್ ನಾಯ್ಕ ತಿಳಿಸಿದ್ದಾರೆ.
ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು, ಸ್ಮರಣಿಕೆ ಮತ್ತು ಸನ್ಮಾನಪತ್ರವನ್ನು ಒಳಗೊಂಡಿರುತ್ತದೆ. ಜುಲೈ 30ರಂದು ಸಿದ್ದಾಪುರದ ಭಾಲಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧ್ಯಕ್ಷ ಮನಮೋಹನ್ ನಾಯ್ಕ ಹೇಳಿಕೆಯನ್ನು ಉಲ್ಲೇಖಿಸಿ ವಾರ್ತಾಭಾರತಿ ವರದಿ ಮಾಡಿದೆ.
1983ರಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಸಂಪಾದಕತ್ವದ ಮುಂಗಾರು ದಿನಪತ್ರಿಕೆಯ ಮೂಲಕ ವೃತ್ತಿ ಜೀವನ ಆರಂಭಿಸಿದ ದಿನೇಶ್ ಅಮೀನ್ ಮಟ್ಟು ನಂತರ 1989 ರಿಂದ 2013ರವರೆಗೆ ಪ್ರಜಾವಾಣಿ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 2013 ರಿಂದ 2018ರವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ.
ಅಮೀನ್ ಮಟ್ಟು ಅವರ ಮಾಧ್ಯಮ ಕ್ಷೇತ್ರದಲ್ಲಿನ ಅನುಪಮ ಸೇವೆಯನ್ನು ಪರಿಗಣಿಸಿ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮನಮೋಹನ್ ನಾಯ್ಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.