ಜನನ-ಮರಣ ನೋಂದಣಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಅಖಿಲ ಭಾರತ ವಕೀಲರ ಒಕ್ಕೂಟ ಕರ್ನಾಟಕ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಉಪವಿಭಾಗಾಧಿಕಾರಿಗಳಿಗೆ ವರ್ಗಾವಣೆ ಮಾಡಿರುವುದು ಜನ ವಿರೋಧಿ ಕ್ರಮವಾಗಿದೆ ಎಂದು ಪ್ರತಿಭಟನಾನಿರತ ವಕೀಲರು ಆರೋಪಿಸಿದರು.
ನ್ಯಾಯಾಲಯದಲ್ಲಿ ಕ್ರಮಬದ್ಧವಾಗಿ ಹಾಗೂ ಪ್ರಮಾಣಿತ ಕ್ರಮದ ಮೂಲಕ ಜರುಗುತ್ತಿದ್ದ ನ್ಯಾಯ ವ್ಯವಸ್ಥೆಯನ್ನು ಕೈಬಿಟ್ಟು ಕಂದಾಯ ಅಧಿಕಾರಿಗಳಿಗೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜನನ-ಮರಣ ನೋಂದಣಿ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯಾದ್ಯಂತ ವಕೀಲರು ಈ ತಿದ್ಉಪಡಿ ಆದೇಶವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಾದ್ಯಂತ ವಕೀಲರು ಸಾಕಷ್ಟು ಪ್ರಬಲವಾದ ವಿರೋಧ ವ್ಯಕ್ತಪಡಿಸಿದರೂ ಸರ್ಕಾರ ಆದೇಶವನ್ನು ವಾಪಸ್ ಪಡೆಯಲು ಹಿಂದೇಟು ಹಾಕುತ್ತಿರುವುದು ಸರಿಯಾದ ಕ್ರಮವಾಗಿರುವುದಿಲ್ಲ ಎಂದು ಆರೋಪಿಸಿದರು.
ಸರ್ಕಾರ ತಕ್ಷಣವೇ ತಿದ್ದುಪಡಿ ಆದೇಶವನ್ನು ವಾಪಸು ಪಡೆಯುವಂತೆ ಅಖಿಲ ಭಾರತ ವಕೀಲರ ಒಕ್ಕೂಟ ಎಐಎಲ್.ಯು ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.