ಇನ್ನು ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಬಾರಿ ಮಳೆಯಾಗುವ ಸೂಚನೆ ಇರುವ ಹಿನ್ನೆಲೆಯಲ್ಲಿ ಎಲ್ಲ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಮುಖ್ಯಾಧಿಕಾರಿಗಳು, ಆಯುಕ್ತರು, ಪಿಡಿಓಗಳು ಮತ್ತು ಸಿಬ್ಬಂದಿ ತಮ್ಮ ಕೇಂದ್ರ ಸ್ಥಾನದಲ್ಲಿಯೇ ಲಭ್ಯವಿದ್ದು, 24/7 ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ಜಿಲಾಧಿಕಾರಿಗಳ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡೀಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಾತನಾಡಿದರು.
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯ ಬಹುತೇಕ ಕೆರೆಗಳು ಭರ್ತಿಯಾಗಿದ್ದು ನೀರು ಶೇಖರಣಾ ಸಾಮರ್ಥ್ಯ ಇರುವುದಿಲ್ಲ ಮತ್ತು ತೇವಾಂಶ ಹೆಚ್ಚು ಇರುವ ಕಾರಣ ಮಳೆ ನೀರು ಇಂಗದೆ ಭೂಮಿಯ ಹೊರಭಾಗದಲ್ಲಿ ಹರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾದಲ್ಲಿ ಸಮಸ್ಯೆ ಹೆಚ್ಚಳವಾಗಲಿದೆ. ಈ ಕಾರಣಗಳಿಂದಾಗಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಸಂಬಂಧಿಸಿದ ಗ್ರಾಮಲೆಕ್ಕಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ತಮ್ಮ ವ್ಯಾಪ್ತಿಯ ಕ್ಷೇತ್ರಗಳಲ್ಲಿ ಸುತ್ತಿ ಮಳೆಹಾನಿ ಸಂಬಂಧಿತ ಪ್ರಕರಣಗಳನ್ನು ಅವಲೋಕಿಸಬೇಕು ಮತ್ತು ತಹಶೀಲ್ದಾರ್‌ಗಳು ತಮ್ಮ ಅಧೀನ ಸಿಬ್ಬಂಧಿಗಳಿಗೆ ಜವಾಬ್ದಾರಿ ವಹಿಸಿ, ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದರು.
ಪಿಆರ್‌ಇಡಿ, ಸಣ್ಣ ನೀರಾವರಿ, ಪಿಡಬ್ಲೂಡಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರುಗಳು ತಮ್ಮ ವ್ಯಾಪ್ತಿಯ ಕೆರೆ-ಕಟ್ಟೆಗಳು ಮತ್ತು ಇತರೆ ಜಲಕಾಯ ಪ್ರದೇಶಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.