ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದು ಅವರಿಗೆ 61 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ನಿವಾಸದಲ್ಲಿ ನಿನ್ನೆ ರಾತ್ರಿ ಶೌಚಾಲಯಕ್ಕೆ ಹೋಗಿದ್ದಾಗ ಕುಸಿದುಬಿದ್ದಿದ್ದರು. ಹತ್ತು ನಿಮಿಷವಾದರೂ ಬಾರದಿದ್ದಾಗ ಮನೆಯವರು ಹೋಗಿ ನೋಡಿದಾಗ ಶೌಚಾಲಯದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಕತ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಉಮೇಶ್ ಕತ್ತಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಮೇಶ್ ಕತ್ತಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಅಪಾರ ಬೆಂಬಲಿಗರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ವಾಸಿಯಾದ ಉಮೇಶ್ ಕತ್ತಿ 1985ರಲ್ಲಿ ಜನತಾ ಪರಿವಾದ ಮೂಲಕ ರಾಜಕೀಯ ಪ್ರವೇಶ ಪಡೆದರು. ಚುನಾವಣೆಯಲ್ಲಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು.
1996 ರಿಂದ 1999 ವರೆಗೆ ಕತ್ತಿ ಅವರು ಸಕ್ಕರೆ ಸಚಿವರಾಗಿ, 2008ರಲ್ಲಿ ಕೃಷಿ ಸಚಿವರಾಗಿ, 2010 ರಿಂದ 13ರವರೆಗೆ ಕೃಷಿ ಸಚಿವರಾಗಿ, ನಂತರ ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವರಾಗಿ ಕೆಲಸ ಮಾಡಿದ್ದಾರೆ.
ಉಮೇಶ್ ಕತ್ತಿ ಅವರು ಆಗಾಗ ಪ್ರತ್ಯೇಕ ರಾಜ್ಯದ ಕೂಗು ಹಾಕುತ್ತಿದ್ದರು. ಜೊತೆಗೆ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂಬುದನ್ನು ಆಗಾಗ ಹೇಳುತ್ತಿದ್ದುದನ್ನು ಇಲ್ಲಿ ಸ್ಮರಿಸಬಹುದು.