ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ. ಇದು ದೇಶದ ಸಮಗ್ರತೆ ಮತ್ತು ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತರುತ್ತದೆ. ಅಲ್ಲದೆ ಸಂಘಟನೆಯು ಸಾರ್ವಜನಿಕ ಶಾಂತಿ ಮತ್ತು ಕೋಮುಸೌಹಾರ್ದತೆಯನ್ನು ಕದಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಗೃಹ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ಹೇಳಿದೆ.
ಸಮಾಜದ ಒಂದು ನಿರ್ದಿಷ್ಟ ವರ್ಗವನ್ನು ತೀವ್ರಗಾಮಿಯನ್ನಾಗಿ ಪಿಎಫ್ಐ ರಹಸ್ಯ ಕಾರ್ಯಸೂಚಿಯನ್ನು ಅನುಸರಿಸುತ್ತಿದೆ. ಅಲ್ಲದೆ ದೇಶದ ಸಂವಿಧಾನಿಕ ಅಧಿಕಾರದ ಕಡೆಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಹೊರಗಿನ ನಿಧಿ ಮತ್ತು ಸೈದ್ದಾಂತಿಕ ಬೆಂಬಲದೊಂದಿಗೆ ಇದು ದೇಶದ ಆಂತರಿಕ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಆಲ್ ಇಂಡಿಯ ಇಮಾಮ್ಸ್ ಕೌನ್ಸಿಲ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ರಿಹಾಬ್ ಇಂಡಿಯಾ ಫೌಂಡೇಷನ್, ನ್ಯಾಷನಲ್ ವುಮೆನ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಷನ್, ರೆಹಾಬ್ ಫೌಂಡೇಷನ್ ಕೇರಳ ಸಂಘಟನೆಗಳನ್ನು ನಿಷೇಧಿಸಲಾಗಿದೆ.