Thursday, November 21, 2024
Google search engine
Homeಜಿಲ್ಲೆದಲಿತರ ಮೇಲಿನ ದೌರ್ಜನ್ಯ ಪ್ರಸ್ತಾಪಿಸಿ ರಾಹುಲ್ ಗಾಂಧಿ ಗಮನ ಸೆಳೆದ ಮುರುಳಿ ಕುಂದೂರು

ದಲಿತರ ಮೇಲಿನ ದೌರ್ಜನ್ಯ ಪ್ರಸ್ತಾಪಿಸಿ ರಾಹುಲ್ ಗಾಂಧಿ ಗಮನ ಸೆಳೆದ ಮುರುಳಿ ಕುಂದೂರು

ಕರ್ನಾಟಕ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಏರಿಕೆ ಆಗುತ್ತಿವೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆಯುವಂತೆ ದಲಿತ ಮುಖಂಡ ಮುರುಳಿ ಕುಂದೂರು ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದರು.

ತುಮಕೂರು ಜಿಲ್ಲೆಯಲ್ಲಿ ವರದಿಯಾಗಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪ್ರಸ್ತಾಪಿಸಿದ ಮುರುಳಿ ಕುಂದೂರು, ಗುಬ್ಬಿಯ ಪೆದ್ದನಹಳ್ಳಿಯಲ್ಲಿ ದಲಿತ ಯುವಕರ ಜೋಡಿ ಕೊಲೆ ಪ್ರಕರಣದಲ್ಲಿ ಜಿಲ್ಲಾಡಳಿತ ಸರಿಯಾಗಿ ನಡೆದುಕೊಳ್ಳಲಿಲ್ಲ. ಜನಪ್ರತಿನಿಧಿಗಳ ಒತ್ತಡಕ್ಕೆ ಒಳಗಾದ ಅಧಿಕಾರಿಗಳು ಜೋಡಿ ಕೊಲೆ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಅವರ ಗಮನಕ್ಕೆ ತಂದರು.

ರಾಜ್ಯದಲ್ಲಿ ದಲಿತ ಯುವತಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದರೂ ಅತ್ಯಾಚಾರ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ದಲಿತರ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರಗಳ ಗಮನ ಸೆಳೆಯುವಂತೆ ನೋಡಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಒತ್ತಾಯಿಸಿದರು.

ತುಮಕೂರು ಜಿಲ್ಲೆಯ ಒಂದು ಭಾಗದಲ್ಲಿ ರಾಗಿ ಮತ್ತು ತೆಂಗನ್ನು ಬೆಳೆಯುತ್ತಾರೆ. ಇನ್ನೊಂದು ಭಾಗದಲ್ಲಿ ಕಡಲೆಕಾಯಿಯನ್ನು ಬೆಳೆಯುತ್ತಾರೆ. ಈ ರೀತಿಯ ಬೆಳೆಗಳನ್ನು ಬೆಳೆಯುವ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ರೈತರ ನೆರವಿಗೆ ಬರುತ್ತಿಲ್ಲ. ಅತಿವೃಷ್ಟಿಯಿಂದ ರೈತರು ಕಂಗಾಲಾಗಿದ್ದಾರೆ. ರೈತರ ನೆರವಿಗೆ ಸರ್ಕಾರಗಳು ಬರುವಂತೆ ಒತ್ತಾಯಿಸಬೇಕು ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಡಿವೈಡರ್ ಗಳನ್ನು ಮಾಡಲಾಗಿದೆ. ಇದರಿಂದ ಸಾರ್ವಜನಿಕರು, ರೈತರು ಮತ್ತು ಕೂಲಿ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಹೋಗಿಬರಲು ತೊಂದರೆಯಾಗುತ್ತಿದೆ. ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಜನರು ನಾಲ್ಕೈದು ಕಿಲೋ ಮೀಟರ್ ಸುತ್ತು ಬಳಸಿ ಬರುವಂತೆ ಆಗಿದೆ. ಹಾಗಾಗಿ ಗ್ರಾಮಗಳು ಇರುವ ಜಾಗದಲ್ಲೇ ಡಿವೈಡರ್ ನಿರ್ಮಾಣ ಮಾಡಬೇಕು. ಜನರಿಗೆ ಅವಕಾಶ ಮಾಡಿಕೊಡಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿದರು.

ಕುಂದೂರು ಮುರಳಿ ಪ್ರಸ್ತಾಪಿಸಿದ ಎಲ್ಲಾ ವಿಷಯಗಳನ್ನು ಗಮನವಿಟ್ಟು ಆಲಿಸಿದ ಪಾದಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಈ ಬಗ್ಗೆ ಸರ್ಕಾರಗಳ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ರಾಹುಲ್ ಗಾಂಧಿ ಪಾದಯಾತ್ರೆ ಉದ್ದಕ್ಕೂ ಎಲ್ಲಾ ವರ್ಗದ ಜನರನ್ನು ಭೇಟಿ ಮಾಡಿ ಅವರು ಪ್ರಸ್ತಾಪಿಸುವ ಸಮಸ್ಯೆಗಳನ್ನು ಕಿವಿಗೊಟ್ಟು ಆಲಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular