ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಲು ಅಕ್ಟೋಬರ್ 8ರಂದು ನಡೆದ ಸಂಪುಟಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಸಂಪುಟಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ಎಸ್.ಸಿ ಸಮುದಾಯಕ್ಕೆ ಶೇಕಡ 15 ರಿಂದ 17ಕ್ಕೆ ಮೀಸಲಾತಿ ಹೆಚ್ಚಿಸಲಾಗಿದೆ. ಹಾಗೆಯೇ ಎಸ್.ಟಿ. ಸಮುದಾಯಕ್ಕೆ ಶೇಕಡ 3 ರಿಂದ 7ಕ್ಕೆ ಮೀಸಲಾತಿ ನೀಡಿ ಸಂಪುಟಸಭೆ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಬೇರೆ ಸಮುದಾಯಗಳಿಗೂ ಮೀಸಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದೇವೆ. ಜೊತೆಗೆ ಒಳಮೀಸಲಾತಿಯ ಕುರಿತು ಕೂಡ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.
ಸದಾಶಿವ ಆಯೋಗದ ವರದಿ ಬಗ್ಗೆ ಪರಿಶೀಲನೆ ನಡೆಸಿ ಬೇರೆ ಬೇರೆ ಸಮುದಾಯಗಳ ಮೀಸಲಾತಿ ಹೆಚ್ಚಳದ ಕುರಿತು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು.