ತ್ರಿಪುರದ ರಾಜ್ಯ ಕಾರ್ಮಿಕ ಸಚಿವ ಭಗನ್ ದಾಸ್ ಅವರ ಪುತ್ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದು ರಾಜ್ಯ ಸರ್ಕಾರ ಆತನ ಬೆಂಬಲಕ್ಕೆ ನಿಂತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
16 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯ ಸ್ನೇಹಿತೆಗೆ ಆಮಿಷವೊಡ್ಡಿ ಪಾರ್ಟಿ ನಡೆಯುತ್ತಿದ್ದ ಕುಮಾರ್ ಘಾಟ್ ನಲ್ಲಿರುವು ಬಾಡಿಗೆ ಮನೆಗೆ ಕರೆದೊಯ್ದಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಂತರ ಆಕೆಯನ್ನು ಕೊಠಡಿಯೊಂದಕ್ಕೆ ಕರೆದೊಯ್ದು ಪಾನೀಯ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಆರು ಮಂದಿಯನ್ನು ಬಂಧಿಸಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರವು ಸಚಿವರ ಪುತ್ರನನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಮತ್ತು ಸಿಪಿಎಂ ವಾಗ್ದಾಳಿ ನಡೆಸಿವೆ. ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿವೆ.
ತ್ರಿಪುರದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ಸಿಪಿಎಂ ಆರೋಪಿಸಿದೆ. ಕಳೆದ ಕೆಲವು ತಿಂಗಳುಗಳಲ್ಲಿ ತ್ರಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧವು ದೈನಂದಿನ ವಿದ್ಯಮಾನವಾಗಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ರಾಜ್ಯದ ಸಚಿವರೊಬ್ಬರ ಮಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ನಂತರ ಬಾಡಿಗೆ ವಸತಿ ಗೃಹದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಯಿತು. ಹಾಗಾಗಿ ಆತನನ್ನು ಬಂಧಿಸಬೇಕಿತ್ತು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.