ಗರ್ಭಿಣಿ ಮತ್ತು ಅವಳಿ ಶಿಶುಗಳ ಸಾವಿಗೆ ಕಾರಣರಾದ ತುಮಕೂರು ಜಿಲ್ಲಾಸ್ಪತ್ರೆ ಅಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಅಮಾನತುಗೊಳಿಸಬೇಕು ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜಿನಾಮೆ ನೀಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ತುಮಕೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.
ಗರ್ಭಿಣಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲದ ಕಾರಣ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಲು ನಿರಾಕರಿಸಿ ಕರ್ತವ್ಯಲೋಪ ಎಸಗಿ ನಿರ್ಲಕ್ಷ್ಯ ವಹಿಸಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ ಅಧ್ಯಕ್ಷ ಈ.ಶಿವಣ್ಣ ತೀವ್ರವಾಗಿ ಖಂಡಿಸಿದ್ದಾರೆ.
ಘಟನೆಗೆ ಕಾರಣವಾಗಿರುವ ಎಲ್ಲಾ ಅಧಿಕಾರಿಗಳನ್ನು ಈ ಕೂಡಲೇ ತನಿಖೆಗೆ ಒಳಪಡಿಸಬೇಕು. ತಾಯಿ ಮತ್ತು ಅವಳಿ ಶಿಶುಗಳ ಸಾವಿನ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.
ತುಮಕೂರು ಜಿಲ್ಲಾ ಅಸ್ಪತ್ರೆ ಸೇರಿದಂತೆ ತಾಲ್ಲುಕು ಕೇಂದ್ರಗಳಲ್ಲಿ ಸಹ ಸರ್ಕಾರಿ ಅಸ್ವತ್ರೆಗಳಲ್ಲಿ ರೋಗಿಗಳ ಜೊತೆಯಲ್ಲಿ ಸ್ನೇಹ ಪೂರ್ವವಾಗಿ ನಡೆದು ಕೊಳ್ಳುವುದರಲ್ಲಿ ಕೊರತೆಗಳಿವೆ. ಹೀಗಾಗಿ ಸರ್ಕಾರ ಎಲ್ಲಾ ಅಸ್ಪತ್ರೆಗಳಿಗೆ ಅಗತ್ಯ ಸಿಬ್ಬಂದಿಯನ್ನು ನೇಮಿಸುವಂತೆ ಒತ್ತಾಯಿಸಿದರು.
ಆಸ್ಪತ್ರೆಯಲ್ಲಿ ರೋಗಿಗಳಿಂದ ವಸೂಲಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ಕ್ರಮ ಕೈಗೊಳ್ಳಬೇಕು ಈ.ಶಿವಣ್ಣ ಆಗ್ರಹಿಸಿದರು.
ಗ್ರಾಮಾಂತರ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ ಎಂಬ ನಾಮಫಲಕಗಳನ್ನು ಅಳವಡಿಸಲಾಗಿದೆ. ಆದರೆ ಸಂಜೆ 5 ಗಂಟೆಗೆ ಎಲ್ಲಾ ಆಸ್ಪತ್ರೆಗಳ ಬಾಗಿಲು ಮುಚ್ಚಿರುತ್ತವೆ. ಹೀಗಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ನಡುವಿನ ಒಳ ಒಪ್ಪಂದವೂ ಕಾರಣವಾಗಿದೆ ಎಂದರು.
ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಕೇವಲ ದಾಖಲೆಗಳನ್ನು ಒದಗಿಸಿಲ್ಲ ಎಂಬ ಕಾರಣಕ್ಕೆ ವೈದ್ಯರು ಚಿಕಿತ್ಸೆ ನೀಡದೆ ಹೋದರೆ ಮನುಷ್ಯನ ಜೀವಕ್ಕೆ ಬೆಲೆ ಇಲ್ಲದಂತೆ ಆಗಿದೆ. ಆದ್ದರಿಂದ ಸರ‍್ಕಾರ ಉಚಿತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ನಗರಾಧ್ಯಕ್ಷ ಶಶಿ ವರ್ಧನ್, ಜಿಲ್ಲಾ ಸಮಿತಿ ಸದಸ್ಯರಾದ ಸಿಂಚನ, ರಾಧಿಕ, ಚಂದ್ರಕಲಾ ಆಗ್ರಹಿಸಿದ್ದಾರೆ.