ರಾಜ್ಯದ ಖಾಸಗಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಡಿತಗೊಳಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ತೀವ್ರವಾಗಿ ಖಂಡಿಸಿದೆ.
ಈ ಬಗ್ಗೆ ಪ್ರತಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎಸ್ಎಫ್ಐ ತುಮಕೂರು ಜಿಲ್ಲಾಧ್ಯಕ್ಷ ಈ.ಶಿವಣ್ಣ ಬಿಜೆಪಿ ಸರ್ಕಾರ ಖಾಸಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ನೀಡದಿರುವುದು ಖಂಡನೀಯ. ಬಿಜೆಪಿ ಸರ್ಕಾರ ಕೂಡಲೇ ಹಾಸ್ಟೆಲ್ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದಿನ ಸರ್ಕಾರ ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ ಹಾಸ್ಟೆಲ್ ನೀಡದೆ ವಿದ್ಯಾರ್ಥಿಗಳಿಗೆ ವಂಚನೆ ಮಾಡಿದೆ ಎಂದು ಶಿವಣ್ಣ ದೂರಿದರು.
ಹಿಂದಿನ ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ನಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಿತ್ತು. ಈಗಿನ ಸರ್ಕಾರ ಸೌಲಭ್ಯವನ್ನು ಕಿತ್ತುಕೊಂಡಿದೆ ಎಂದು ಆರೋಪಿಸಿದರು.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಇಚ್ಚಿಸುವ ಕೋರ್ಸ್ಗಳು ಇಲ್ಲದಿರುವುದರಿಂದ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವುದು ಸಾಮಾನ್ಯ ಸಂಗತಿಯಾಗಿದೆ. ಇಂಜಿನಿಯರಿಂಗ್, ಕಾನೂನು ಪದವಿ, ವೈದ್ಯಕೀಯ, ನರ್ಸಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳು ಸರ್ಕಾರಿ ಕಾಲೇಜುಗಳಲ್ಲಿ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಗಳಿಗಾಗಿ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಾರೆ. ಹಾಗಾಗಿ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದ ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಈ ನಿರ್ಧಾರದಿಂದ ಬಡತನ ರೇಖೆಗಿಂತ ಕೆಳಗೆ ಇರುವ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದರಿಂದ ವಂಚಿತರಾಗುತ್ತಾರೆ. ಹಾಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ಕಡಿತಗೊಳಿಸಿರುವ ಸೌಲಭ್ಯವನ್ನು ಹಿಂದಿನಂತೆಯೇ ಕಲ್ಪಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.
ಹಿಂದಿನ ಸರ್ಕಾರ ವಿದ್ಯಾರ್ಥಿಗಳು ರಾಜ್ಯದ ಯಾವುದೇ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ ಆ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಿತ್ತು. ಈಗಲೂ ಕೂಡ ಹಿಂದಿನಂತೆಯೇ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಹೇಳುತ್ತದೆ. ಆದರೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ, ಹಾಸ್ಟೆಲ್ ಸ್ಥಗಿತಗೊಳಿಸಿರುವುದರಿಂದ ಆ ವಿದ್ಯಾರ್ಥಿಗಳ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತದೆ ಎಂದು ಶಿವಣ್ಣ ಪ್ರಶ್ನಿಸಿದ್ದಾರೆ.
ಕೂಡಲೇ ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಯಾವುದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದರೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಮತ್ತು ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ನಗರಾಧ್ಯಕ್ಷ ಶಶಿ ವರ್ಧನ್, ಜಿಲ್ಲಾ ಸಮಿತಿ ಸದಸ್ಯರಾದ ಸಿಂಚನ, ರಾಧಿಕ ಚಂದ್ರಕಲಾ ಒತ್ತಾಯಿಸಿದ್ದಾರೆ.