ಯಾವುದೇ ಪಕ್ಷದಲ್ಲಿದ್ದರೂ ತಾನಿರುವ ಪಕ್ಷದ ಮುಖಂಡರನ್ನು ಟೀಕಿಸುವ ಪ್ರವೃತ್ತಿಯುಳ್ಳ ವಿಧಾನಪರಿಷತ್ ಸದಸ್ಯ ಹಾಗೂ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದ್ದು ಬಿಜೆಪಿ ತೊರೆಯುತ್ತಾರ ಎಂಬ ಬಗ್ಗೆ ತೀವ್ರ ಚರ್ಚೆಗೆ ಗ್ರಾಸ ಒದಗಿಸಿದೆ.
ಡಿಸೆಂಬರ್ 5ರಂದು ದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಬಂದಿದ್ದ ವಿಶ್ವನಾಥ್ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತೀವ್ರ ಟೀಕೆಗೆ ಗುರಿಪಡಿಸಿದ್ದ ಎಚ್.ವಿಶ್ವನಾಥ್ ಜೆಡಿಎಸ್ ಸೇರಿದ್ದರು. ನಂತರ ಅಲ್ಲಿಂದ ಬಿಜೆಪಿಗೆ ಹಾರಿ ಸಾಹಿತಿಗಳ ಕೋಟಾದಲ್ಲಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಅವರನ್ನು ಟೀಕಿಸಿದ್ದರು.
ಇದೀಗ ಕಾಂಗ್ರೆಸ್ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಮತ್ತು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗೆ ಪುಷ್ಟಿ ನೀಡಿದೆ.
ಸಿದ್ದರಾಮಯ್ಯ ಅವರನ್ನು ಕಂಡರೆ ಆಗದಂತಹ ಸಿಟ್ಟು ಹೊರಹಾಕಿದ್ದ ಎಚ್.ವಿಶ್ವನಾಥ್ ಈಗ ಉಭಯ ನಾಯಕರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಉಭಯ ನಾಯಕರು ಬೇಟಿಯಾಗಿರುವುದನ್ನು ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಮತ್ತು ಫೇಸ್ಬುಕ್ ಖಾತೆಯಲ್ಲಿ ವಿಡಿಯೂವನ್ನು ಹಂಚಿಕೊಂಡಿದ್ದಾರೆ.