ತುಮಕೂರು ನಗರದ ಗುತ್ತಿಗೆದಾರರೊಬ್ಬರು ದೇವರಾಯನದುರ್ಗ ಗೆಸ್ಟ್ ಹೌಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿಸೆಂಬರ್ 30ರಂದು ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಆದರೂ ಕಾಮಗಾರಿ ಮಾಡಿಸಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಸರ್ಕಾರ ಕಾಮಗಾರಿ ಹಣವನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಹೇಳಲಾಗಿದೆ. 40 ಪರ್ಸೆಂಟ್ ಕಮಿಷನ್ ಗುತ್ತಿಗೆದಾರರನ್ನು ಬಲಿ ಪಡೆದಿರಬಹುದು ಎಂದು ಶಂಕಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರರನ್ನು ತುಮಕೂರು ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎಸ್. ಪ್ರಸಾದ್ ಎಂದು ಗುರುತಿಸಲಾಗಿದೆ.
ಪ್ರಸಾದ್ ತನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮ್ ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಗುತ್ತಿಗೆದಾರರಿಗೆ ಕೆಲಸ ಮಾಡಿದ ಬಿಲ್ ಗಳನ್ನು ಅಧಿಕಾರಿಗಳು ಸರಿಯಾಗಿ ಮಾಡಿಕೊಡುವುದಿಲ್ಲ. ರಾಜ್ಯದ ಭ್ರಷ್ಟ ಆಡಳಿತ ವ್ಯವಸ್ಥೆ ಇಂತಹ ಪ್ರಕರಣಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.