ತುಮಕೂರು ನಗರದಲ್ಲಿ ಜನವರಿ 24ರಂದು ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಭಾಗವಹಿಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಬೇಕಾದ ಅಗತ್ಯ ವಾತಾವರಣ, ಪಕ್ಷ ಸಂಘಟನೆ, ಸರ್ಕಾರದ ಆಡಳಿತ ವೈಖರಿ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ಶಫಿಉಲ್ಲಾ ಮಾತನಾಡಿ, 12 ಜಿಲ್ಲೆಗಳಲ್ಲಿ ಕಾಂಗ್ರೆಸ್ ಯಾತ್ರೆ ಪೂರ್ಣಗೊಂಡಿದ್ದು, ಜನವಿರೋಧಿ ಸರ್ಕಾರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಮಾರ್ಚ್ 17ರ ವೇಳೆಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನೋಟಿಫೀಕೇಷನ್ ಆಗುವ ಸಾಧ್ಯತೆ ಇದ್ದು, ಪಕ್ಷದ ಕಾರ್ಯಕರ್ತರು ಸಾಕಷ್ಟು ಶ್ರಮಿಸಿ, ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ, ಮಾಜಿ ಅಧ್ಯಕ್ಷ ಎಸ್. ಷಫಿಅಹಮದ್, ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಮಾಜಿ ಶಾಸಕರಾದ ಡಾ. ಎಸ್.ರಫೀಕ್ ಅಹಮದ್, ಆರ್.ನಾರಾಯಣ್, ಮುಖಂಡರಾದ ರೆಡ್ಡಿ ಚಿನ್ನಯಲ್ಲಪ್ಪ, ಟಿ.ಹೆಚ್.ವೆಂಕಟೇಶ್, ಫರನಾಬೇಗಂ, ಧನಂಜಯ್, ಇಕ್ಬಾಲ್ ಅಹಮದ್, ಮರಿಚಿನ್ನಮ್ಮ ಇದ್ದರು.