ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹೋದರಿ ಗಗನ ಸುಕನ್ಯ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಗಗನ ಸುಕನ್ಯ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಗಗನ ಸುಕನ್ಯಾ, ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ರಾಜಕಾರಣಿಗಳು ಗೆಲುವು ಸಾಧಿಸಿ ಅವರು ಮಾತ್ರ ಅಭಿವೃದ್ಧಿಯಾದರು. ಕ್ಷೇತ್ರವನ್ನು ಅಭಿವೃದ್ಧಿಪಡಿಸಲಿಲ್ಲ ಎಂದು ದೂರಿದರು.
ಕೋಲಾರ ಜಿಲ್ಲೆಯ ಸಾಮಾನ್ಯ ಜನರಿಗೆ ಗುಣಮಟ್ಟದ ಮೂಲಭೂತ ಸೌಲಭ್ಯಗಳು ಸಿಗಬೇಕು ಎಂದು ಹೇಳಿದ ಅವರು, ಇಲ್ಲಿನ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅಭಿವೃದ್ಧಿಯಾಗಬೇಕು. ಇವೆಲ್ಲ ಸಾಧ್ಯವಾಗಬೇಕಾದರೆ ಆಮ್ ಆದ್ಮಿ ಪಕ್ಷದ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಬೇಕು. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, ಗಗನ ಸುಕನ್ಯಾ ಕೋಲಾರ ಜಿಲ್ಲಾ ಸಹಕಾರಿ ಒಕ್ಕೂಟದ ಚುನಾಯಿತ ನಿರ್ದೇಶಕರಾಗಿ ಜಿಲ್ಲೆಯ ನೂರಾರು ಮಹಿಳೆಯರನ್ನು ಸಹಕಾರಿ ಕ್ಷೇತ್ರಕ್ಕೆ ಕರೆತಂದಿದ್ದಾರೆ. ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಇವರು ಬಿಜೆಪಿಯ ರಾಜ್ಯ ಪರಿಶಿಷ್ಟ ಜಾತಿ ಘಟಕದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ಗಗನ ಸುಕನ್ಯ ಕೋವಿಡ್ ಸಂದರ್ಭದಲ್ಲಿ ರೇಷನ್ ಕಿಟ್ ಹಂಚಿ ಬಡವರಿಗೆ ನೆರವಾಗಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದ ನೂರಾರು ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಟ್ಯಾಗ್ ಗಳು, ನೋಟ್ ಪುಸ್ತಕಗಳನ್ನು ಹಂಚಿಕೆ ಮಾಡಿದ್ದಾರೆ. ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿ ಭಾಗದ ಶಾಲೆಗಳ ಅಭಿವೃದ್ದಿಗೆ ಶ್ರಮಿಸಿದ್ದಾರೆ ಎಂದರು.