ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಇಂಡಿಯನ್ ಎನರ್ಜಿ ವೀಕ್-2023ರನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದೆ. ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪರಿವರ್ತನೆಯಲ್ಲಿ ಭಾರತ ಇಂದು ಪ್ರಬಲವಾದ ದನಿಯಲ್ಲಿ ಒಂದಾಗಿ ಮಾರ್ಪಟ್ಟಿದೆ ಎಂದು ಹೇಳಿದರು.
ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಇಂದು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗಿಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಇಂಧನ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಮೊದಲಾದವರು ಉಪಸ್ಥಿತರಿದ್ದರು.