Thursday, January 29, 2026
Google search engine
Homeಮುಖಪುಟಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ರಾಜಿನಾಮೆ ನೀಡಲಿ - ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ರಾಜಿನಾಮೆ ನೀಡಲಿ – ಸಿದ್ದರಾಮಯ್ಯ

ಭ್ರಷ್ಟಾಚಾರ ಪ್ರಕರಣದಲ್ಲಿ ಕೇವಲ ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷ‌ದ ನಾಯಕ ಸಿದ್ದರಾಯ್ಯ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದಿ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ದಾರಾ? ಎಂದು ಪ್ರಶ್ನಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಸಚಿವರು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ. ಬೊಮ್ಮಾಯಿಗೆ ಮಾನ ಮರ್ಯಾದಿ ಇದ್ದರೆ ಮಾಡಾಳ್‌ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್‌ ಮಾಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್‌ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ದೇಶದ ದುರಂತ ನೋಡ್ರೀ ಎಂದರು.

ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತೆ. ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್‌,ಎಸ್‌,ಎಸ್‌ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರ? ಎಂದು ಲೇವಡಿ ಮಾಡಿದರು.

ಸಾಕಪ್ಪ ಸಾಕು 40ರಷ್ಟು ಸರ್ಕಾರ ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40ರಷ್ಟು ಕಮಿಷನ್‌ ಹಗರಣದ ಬಗ್ಗೆ ಮಾತನಾಡಿ ಸರ್‌ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular