ಐದು ಮತ್ತು ಎಂಟನೆ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ಪರಿಚಯಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ
ರಾಜ್ಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅನ್ವಯಿಸಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ರೂಪಿಸಲಿದೆ. ಈ ಸಂಬಂಧ ಹೊರಡಿಸಲಾಗಿರುವ ಸುತ್ತೋಲೆಗೆ ಹೈಕೋರ್ಟ್ ತಡೆ ನೀಡಿದೆ.
ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಮತ್ತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘದಿಂದ ಈ ಸುತ್ತೋಲೆಯನ್ನು ಪ್ರಶ್ನಿಸಲಾಗಿತ್ತು.
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿದ 12.12.2022, 13.2.2022 ಮತ್ತು 04.01.2023ರ ಸುತ್ತೋಲೆಗಳನ್ನು ರದ್ದುಗೊಳಿಸಿದೆ ಎಂದು ನಾನುಗೌರಿ.ಕಾಂ ವರದಿ ಮಾಡಿದೆ.
ಈ ಸುತ್ತೋಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಉದ್ದೇಶಗಳಿಗೆ ವಿರುದ್ಧವಾಗಿವೆ ಎಂದು ಹೈಕೋರ್ಟ್ ತಿಳಿಸಿದೆ.
ಇಂತಹ ಸುತ್ತೋಲೆಗಳು ಕೇವಲ ಕಾಯಿದೆ ಅಥವಾ ನಿಯಮಗಳಿಗೆ ಪೂರಕವಾಗಬಹುದು. ಆದರೆ ಯಾವುದೇ ಸಂದರ್ಭದಲ್ಲಾದರೂ ನಿಯಮಗಳನ್ನು ಬದಲಿಸಲು ಸಾಧ್ಯವಿಲ್ಲ. ಇಂತಹ ಸುತ್ತೋಲೆಗಳನ್ನು ಹೊರಡಿಸಿದ ಸಂದರ್ಭದಲ್ಲಿ ಕಾಯಿದೆಯ ಸೆಕ್ಷನ್ 38(4) ಅಡಿಯಲ್ಲಿ ಪರಿಗಣಿಸಿದಂತೆ ನಿಗದಿತ ಕಾರ್ಯವಿಧಾನಗಳು ಮತ್ತು ಪ್ರಕ್ರಿಯೆಯನ್ನು ಅನುಸರಿಸಬೇಕಾಗುತ್ತದೆ ಎಂದು ನ್ಯಾಯಾಲಯದ ಸ್ಪಷ್ಟಪಡಿಸಿದೆ.