Monday, December 23, 2024
Google search engine
Homeಮುಖಪುಟಧ್ರುವನಾರಾಯಣ್ ನಿಧನಕ್ಕೆ ಗಣ್ಯರ ಕಂಬನಿ

ಧ್ರುವನಾರಾಯಣ್ ನಿಧನಕ್ಕೆ ಗಣ್ಯರ ಕಂಬನಿ

ಮಾಜಿ ಸಂಸದ ಆರ್.ಧ್ರುವನಾರಾಯಣ್ ನಿಧನಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದಿದ್ದಾರೆ.

ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ.

ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟವಾಗಿ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಎಚ್.ಡಿ.ಕೆ

ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಆರ್.ಧ್ರುವನಾರಾಯಣ ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ಭರಿಸಲಾಗದ ನಷ್ಟ. ಅವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಧ್ರುವ ನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದಿದ್ದಾರೆ.

ಸಿಎಂ ಸಂತಾಪ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ರುವನಾರಾಯಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ಅವರು ತುಂಬಾ ಕ್ರೀಯಾಶೀಲರಾಗಿರುತ್ತಿದ್ದರು. ಅವರು ಹೃದಯಘಾತದಿಂದ ನಿಧನ ಹೊಂದಿರುವುದು ಆಘಾತವಾಗಿದೆ. ಚಾಮರಾಜನಗರ ಭಾಗದಲ್ಲಿ ತುಂಬಾ ಚಟುವಟಿಕೆಯಿಂದ ಕೆಲಸ ಮಾಡಿಕೊಂಡಿದ್ರು. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

ಆರ್​.ಧ್ರುವನಾರಾಯಣ ನಿಧನಕ್ಕೆ ಶಾಸಕ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಾಂತವಾಗಿದೆ. ಎಂದೂ ಕೂಡ ದ್ವೇಷದ ರಾಜಕಾರಣ ಮಾಡಿದವರಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಅಭಿವೃದ್ಧಿ ಕೆಲಸಗಳಿಂದ ಜಿಲ್ಲೆಯ ಜನರ ಮನಸು ಗೆದ್ದಿದ್ದರು. ಸ್ನೇಹಿತನ ಅಗಲಿಕೆಯಿಂದ ತುಂಬಾ ದುಃಖ ಆಗಿದೆ. ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಶಾಸಕ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular