ಕಾಂಗ್ರೆಸ್ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ತಿರುಗೇಟು ನೀಡಿದರು.
ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ ಎಂದರು.
ಪುಟ್ಟಣ್ಣ ಅವರಿಗೆ ನಾವು ಅವರಿಗೆ ಟಿಕೆಟ್ ನೀಡುತ್ತಿದ್ದೇವೆ ಎಂದು ಯಾರು ಹೇಳಿದರು? ಪಕ್ಷದ ಅನುಕೂಲಕ್ಕೆ ತಕ್ಕಂತೆ ಪಕ್ಷ ತೀರ್ಮಾನ ಮಾಡಲಿದೆ. ಯಾರ ಬೆದರಿಕೆಗೂ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ. ಪಕ್ಷ ಈ ವಿಚಾರವಾಗಿ ಯಾವ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ ಎಂದರು.