ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಅಧಿಕ ಸ್ಥಾನ ಪಡೆದು ಅಧಿಕಾರ ಹಿಡಿಯಲಿದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅತೀವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ಕೆಲವರು ತಿರುಕನ ಕನಸು ಕಾಣುತ್ತಿದ್ದು ನಾವೇ ಮುಖ್ಯಮಂತ್ರಿ ಆಗಲಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ರ್ಯಾಲಿಯಲ್ಲಿ ಸೇರುವ ಜನರನ್ನು ನೋಡಿ ಕಾಂಗ್ರೆಸ್ ಕಂಗಾಲಾಗಿದೆ ಎಂದರು.
ತುಮಕೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ರಾಜ್ಯದ ಅಧಿಕಾರ ಹಿಡಿಯಲು ತಾವುಗಳು ಕೊಡುಗೆ ನೀಡಬೇಕು. ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಿದ್ದು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ತೆಂಗು ಬೆಳೆಗಾರರ ಆಕ್ರೋಶ:
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಈ ಬಗ್ಗೆ ಒಬ್ಬ ನಾಯಕರು ಬಗ್ಗೆ ಚಕಾರ ಎತ್ತಲಿಲ್ಲ ಎಂದು ತೆಂಗು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ವಿಂಟಾಲ್ ಕೊಬ್ಬರಿಗೆ 20 ಸಾವಿರ ಬೆಂಬಲ ಬೆಲೆ ನೀಡಿ ಖರೀಸಬೇಕೆಂದು ಒತ್ತಾಯ ಮಾಡಿದರೂ ಆ ಬಗ್ಗೆ ಒಂದು ಸೊಲ್ಲು ಎತ್ತಿಲ್ಲ. ರೈತ ನಾಯಕ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರೈತರು ನಡೆಸುತ್ತಿರುವ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಲಿಲ್ಲ ಎಂದು ರೈತರು ಕಿಡಿಕಾರಿದ್ದಾರೆ.
2018ರ ಮಾರ್ಚ್ ತಿಂಗಳಲ್ಲಿ ನಡೆದ ಸಮಾರಂಭಕ್ಕೆ ಅಂದಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ತಿಪಟೂರಿಗೆ ಬಂದಿದ್ದರು. ಸಮಾರಂಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತಿಪಟೂರಿನಲ್ಲಿ ತೆಂಗಿನ ಪಾರ್ಕ್ ಸ್ಥಾಪನೆ ಮಾಡುತ್ತೇವೆ ಎಂದು ಭರವಸೆ ನೀಡಿ ಹೋಗಿದ್ದರು. ನಂತರ ಬಿಜೆಪಿ ಗೆದ್ದು ಸರ್ಕಾರ ರಚಿಸಿದರೂ ತೆಂಗಿನ ಪಾರ್ಕ್ ಸ್ಥಾಪನೆ ಕುರಿತು ಪ್ರಸ್ತಾಪ ಮಾಡಲಿಲ್ಲ ಎಂದು ರೈತರು ಆರೋಪಿಸಿದರು.
ಕೊಬ್ಬರಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ ಇಂದು ಚುನಾವಣಾ ಪ್ರಚಾರಕ್ಕೆ ತಿಪಟೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಆರ್. ಅಶೋಕ್, ಬಿ.ಸಿ.ನಾಗೇಶ್ ಸೇರಿದಂತೆ ಯಾರೂ ತಿಪಟೂರು ರೈತರು ಅನುಭವಿಸುತ್ತಿರುವ ಸಂಕಷ್ಟದ ಕುರಿತು ಮಾತನಾಡದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.