ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಿಂಚನಸೂರು ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರು ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರೂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನಾನು ಅವರು ಜತೆಯಲ್ಲಿ ಅನೇಕ ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇವೆ ಎಂದರು.
ಮಲ್ಲಿಕಾಂರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ ಎಂದು ಬಾಬುರಾವ್ ಚಿಂಚನಸೂರು ಹೇಳಿದರು.
ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿಸಿದ್ದು ಶಿವಕುಮಾರ್ ಅವರು. ಅವರ ಸಹಾಯವನ್ನು ನಾನು ಏಳೇಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ ಎಂದರು.
ಪೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಎಂದು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ ಎಂದರು.