ತುಮಕೂರು ಜಿಲ್ಲೆಯಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಗೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಈ ಯೋಜನೆಗೆ ರೈತರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಗುವಂತೆ ಮಾಡಲು ಅರಿವು ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಅವರು ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳನ್ನು ಬಳಸಿಕೊಂಡು ಈ ಯೋಜನೆ ಸೌಲಭ್ಯ ಪಡೆಯುವಂತೆ ರೈತರನ್ನು ಪ್ರೋತ್ಸಾಹಿಸಬೇಕು. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಗೆ ಫಲಾನುಭವಿಗಳಿಂದ ಅರ್ಜಿಗಳ ಸಂಖ್ಯೆ ಕಡಿಮೆಯಾಗಿದೆ. ಇದು ರೈತರಲ್ಲಿ ಅರಿವಿಲ್ಲ ಎಂಬ ಅಂಶ ಸ್ಪಷ್ಟವಾಗುತ್ತದೆ ಎಂದರು.
ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಬ್ಯಾಂಕ್‌ಗಳು ನಿರಾಸಕ್ತಿ ತೋರಬಾರದು. ಈ ಯೋಜನೆಗೆ ಸಂಪೂರ್ಣ ಸಹಕಾರ ನೀಡಬೇಕು. ಯಾವುದೇ ಕಾರಣಕ್ಕೂ ಯೋಜನೆಗೆ ಆಯ್ಕೆಯಾಗಿ ಸಾಲ ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತಡಮಾಡದೇ ಪ್ರಕ್ರಿಯೆ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಬೇಕು. ಸಕಾರಣವಿಲ್ಲದೆ ಅರ್ಜಿಗಳನ್ನು ತಿರಸ್ಕೃತ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆ ಅನುಷ್ಠಾನದಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು. ಪ್ರಧಾನಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ ಸಮರ್ಪಕವಾಗಿ ಸೌಲಭ್ಯ ತಲುಪಬೇಕು. ರೈತರು ಪಡೆದ ಸೌಲಭ್ಯಗಳು ಉಪಯೋಗವಾಗುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಡಿ ನಿರ್ಮಿಸಿರುವ ಕಟ್ಟೆ, ಚೆಕ್ ಡ್ಯಾಂಗಳ ನಿರ್ವಹಣೆಗಾಗಿ ಅದರ ಸುತ್ತಮುತ್ತಲಿನ ರೈತರ ಸಮಿತಿ ರಚಿಸಬೇಕು. ಕಟ್ಟೆ ಮತ್ತು ಚೆಕ್‌ಡ್ಯಾಂಗಳಲ್ಲಿನ ಹೂಳು ತೆಗೆಯಲು ಸಮತಿಯ ರೈತರಿಗೇ ಅವಕಾಶ ಮಾಡಿಕೊಡಬೇಕು. ಇದರಿಂದ ಕಟ್ಟೆ ಮತ್ತು ಚೆಕ್‌ಡ್ಯಾಂಗಳ ರಕ್ಷಣೆ ಮತ್ತು ನಿರ್ವಹಣೆ ಸಾಧ್ಯವಾಗಲಿದೆ ಎಂದರು.