ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣಾ ರಾಜಕೀಯ ನಿವೃತ್ತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ.
ನಾನು ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ಪತ್ರದಲ್ಲಿ ಬರೆದಿದ್ದಾರೆ.
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ಈ ನಿರ್ಧಾರವನ್ನು ನಮ್ಮ ಲಕ್ಷಾಂತರ ಕಾರ್ಯಕರ್ತರು, ಪಕ್ಷದ ಹಿರಿಯರು ಮೆಚ್ಚುಗೆ ವ್ಯಕ್ತಪಡಿಸಲಿದ್ದಾರೆ ಎಂಬ ನಂಬಿಕೆ ಇದೆ. ನನ್ನ ನಿರ್ಧಾರಕ್ಕೆ ಕಾರ್ಯಕರ್ತರು ಒಪ್ಪಿಗೆ ನೀಡುವುದಿಲ್ಲ ಎಂಬ ಕಾರಣಕ್ಕೆ ಅವರೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದು ಈಶ್ವರಪ್ಪ ಹೇಳಿದರು.