ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ತೊರೆದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಹಾರನಕಣಿವೆ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ನಾನು ಈಗಾಗಲೇ ಪ್ರಚಾರ ಆರಂಭಿಸಿದ್ದೇನೆ. ಕಲ್ಯಾಣ ಕರ್ನಾಠಕ ಪ್ರಗತಿ ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
ಟಿಕೆಟ್ ಕೈತಪ್ಪುವ ಸಾಧ್ಯತೆ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು. ಇದರಿಂದ ಸಹಜವಾಗಿ ನೋವಾಗಿದೆ. ನೀರಾವರಿ ಯೋಜನೆಗಳ ಟೆಂಡರ್ ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನೀಡಿದ ಪ್ರತಿಕ್ರಿಯೆಯಿಂದ ಟಿಕೆಟ್ ಕೈತಪ್ಪಿದೆ ಎಂದು ನನಗೆ ಅನಿಸುವುದಿಲ್ಲ. ಟಿಕೆಟ್ ಸಿಗದಿರಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪುತ್ರ ಬಿ.ವೈ.ವಿಜಯೇಂದ್ರ ಅವರೇ ಟಿಕೆಟ್ ತಪ್ಪಲು ನೇರ ಕಾರಣ ಎಂದು ಆರೋಪಿಸಿದ್ದಾರೆ.
ಈಗಾಗಲೇ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಜನಾರ್ಧನ ರೆಡ್ಡಿಯವರು ಮಾತನಾಡಿದ್ದಾರೆ. ಕಾರ್ಯಕರ್ತರು ಮತ್ತು ಹಿತೈಷಿಗಳ ಅಭಿಪ್ರಾಯ ಪಡೆದು ಸ್ಪರ್ಧೆ ಮಾಡುತ್ತೇನೆ ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
ಇನ್ ಪುಟ್ ಮಾಹಿತಿ – ನಾನುಗೌರಿ.ಕಾಂ