ಕೆಲವೇ ವ್ಯಕ್ತಿಗಳು ಭಾರತೀಯ ಜನತಾ ಪಕ್ಷವನ್ನು ನಿಯಂತ್ರಿಸುತ್ತಿದ್ದು, ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಾಗಿದೆ. ಪಕ್ಷ ಮುಖ್ಯವಾಗಿಲ್ಲ. ಕೆಲವು ವ್ಯಕ್ತಿಗಳನ್ನು ಪಕ್ಷವನ್ನು ನಿಯಂತ್ರಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಭಾರತೀಯ ಜನತಾ ಪಕ್ಷದಲ್ಲಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಪಕ್ಷಕ್ಕಾಗಿ ದುಡಿದ ನನ್ನನ್ನೇ ಹೊರಹಾಕಿದರು. ಹಿರಿಯ ಮುಖಂಡನಾದ ನನ್ನನ್ನು ಅನುಚಿತವಾಗಿ ನಡೆಸಿಕೊಂಡರು. ಇದರಿಂದ ನನಗೆ ಬೇಸರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನನ್ನ ಅಸಮಾಧಾನಕ್ಕೆ ಕಾರಣವಾಗಿವೆ. ಹೀಗಾಗಿ ನೋವಿನಿಂದ ನಾನು ಬಿಜೆಪಿಯನ್ನು ಬಿಟ್ಟು ಬಂದಿದ್ದೇನೆ. ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಪರಿ ನೋವು ತರಿಸಿದೆ. ಬಿಜೆಪಿಯಲ್ಲಿ ಪಕ್ಷ ಮುಖ್ಯವಲ್ಲ. ಕೆಲವೇ ಕೆಲವು ವ್ಯಕ್ತಿಗಳು ಬಿಜೆಪಿಯನ್ನು ನಿಯಂತ್ತಿಸುತ್ತಿವೆ ಎಂದು ಹೇಳಿದ್ದಾರೆ.
ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ದೇನೆ. ಪಕ್ಷವನ್ನು ಕಟ್ಟುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಆದರೂ ನನ್ನನ್ನು ಬಿಜೆಪಿಯಲ್ಲಿ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಇದರಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.