ಚುನಾವಣಾ ಅಕ್ರಮ ಪ್ರಕರಣದ ಸಂಬಂಧ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅವರಿಗೆ ಹೈಕೋರ್ಟ್ ನೀಡಿರುವ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು ಗೌರಿಶಂಕರ್ ಚುನಾವಣೆಗೆ ಸ್ಪರ್ಧಿಸಲು ಹಾದಿ ಸುಗಮಗೊಳಿಸಿದೆ.
ಪ್ರಕರಣದ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಗ್ರಾಮಾಂತರ ಶಾಸಕ ಗೌರಿಶಂಕರ್ ಏ.10ರಂದು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಮಹೇಶ್ವರಿ ಅವರಿದ್ದ ದ್ವಿಪಕ್ಷೀಯ ಪೀಠ ತಡೆಯಾಜ್ಞೆ ನೀಡಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಮತ್ತು ಬಹುಮತ ಸಾಬೀತುಪಡಿಸುವ ವೇಳೆಯಲ್ಲಿ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ.
ಚುನಾವಣೆಯಲ್ಲಿ ನಕಲಿ ವಿಮಾ ಬಾಂಡ್ ಗಳನ್ನು ಹಂಚುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿ ಚುನಾವಣೆಯಲ್ಲಿ ಗೌರಿಶಂಕರ್ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮಾಜಿ ಶಾಸಕ ಸುರೇಶ್ ಗೌಡ ಅವರು ಹೈಕೋರ್ಟ್ ಮೊರೆ ಹೋಗಿದ್ದರು.