ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೊನ ಸೋಂಕು ತಡೆ ಸಂಬಂಧ ತಜ್ಞರ ಸಮಿತಿ ಸಭೆ ನಡೆಸಿದರು. ಸಭೆಯಲ್ಲಿ ಆಗಸ್ಟ್ 16ರವರೆಗೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು ರಾಜ್ಯದೆಲ್ಲೆಡೆ ರಾತ್ರಿ ಕರ್ಪ್ಯೂವನ್ನು ರಾತ್ರಿ 9 ಗಂಟೆಯಿಂದ ಮುಂಜಾನೆ 5ಗಂಟೆಯವರೆಗೆ ವಿಧಿಸಲಾಗಿದೆ.
ಕೊರೊನ ಸೋಂಕಿನ ಮೂರನೇ ಅಲೆ ಜನರ ಮೇಲೆ ಪರಿಣಾಮ ಬೀರದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾರದ ಶನಿವಾರ ಮತ್ತು ಭಾನುವಾರ ಎರಡು ದಿನ ಕಠಿಣ ನಿಯಮಗಳೊಂದಿಗೆ ಲಾಕ್ ಜಾರಿಮಾಡಲಾಗಿದೆ. ಉಳಿದ ಜಿಲ್ಲೆಗಳನ್ನು ಈ ನಿಯಮದಿಂದ ಹೊರಗಿಡಲಾಗಿದೆ.
ಕೇರಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲೂ ಕೊರೊನ ಸೋಂಕು ಹೆಚ್ಚಿದೆ. ಹೀಗಾಗಿ ಗಡಿ ಜಿಲ್ಲೆಗಳಾದ ವಿಜಯಪುರ ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಜೊತೆಗೆ ಕೊರೊನ ಸೋಂಕಿನ ಬಗ್ಗೆ ಜನರು ಎಚ್ಚರ ವಹಿಸಬೇಕು. ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಹೊಸ ಮಾರ್ಗಸೂಚಿಯಂತೆ ಮದುವೆ ಸಮಾರಂಭಕ್ಕೆ 100 ಮಂದಿ ಸೇರಲು ಅವಕಾಶ ನೀಡಿದ್ದರೆ, ಶವ ಸಂಸ್ಕಾರಕ್ಕೆ ಕೇವಲ 20 ಮಂದಿ ಪಾಲ್ಗೊಳ್ಳಬೇಕು ಎಂದು ಸೂಚಿಸಲಾಗಿದೆ.