ತುಮಕೂರು ಗ್ರಾಮಾಂತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಹಾಗಾಗಿ ಈ ಬಾರಿ ಬಿಜೆಪಿ 50 ಸಾವಿರಕ್ಕು ಅಧಿಕ ಮತಗಳಿಂದ ಗೆಲುವು ಸಾಧಿಸಲಿದೆ ಎಂದು ಮಾಜಿ ಶಾಸಕ ಹಾಗು ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ ತಿಳಿಸಿದ್ದಾರೆ.
ತುಮಕೂರಿನ ಅರ್ಧನಾರಿಶ್ವರ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಉಮೇದುವಾರಿಕೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮಾಂತರ ಜನತೆ ಹೆಬ್ಬೂರು, ಗೂಳೂರು ಏತ ನೀರಾವರಿ, ತಮ್ಮ ಗ್ರಾಮದ ಕೆರೆ ಕಟ್ಟೆಗಳಿಗೆ ಹೇಮಾವತಿ ನೀರು, ಗ್ರಾಮದ ದೇವಾಲಯಗಳ ಅಭಿವೃದ್ಧಿಗಾಗಿ ಬದಲಾವಣೆ ಬಯಸಿದ್ದು,ಅಭಿವೃದ್ಧಿ ಶೂನ್ಯ ಜೆಡಿಎಸ್ ವಿರುದ್ದ ಮತ ಹಾಕಲಿದ್ದಾರೆ ಎಂದರು.
ಕಳೆದ ಐದು ವರ್ಷಗಳಲ್ಲಿ ಗ್ರಾಮಾಂತರ ಕ್ಷೇತ್ರ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಹೋಗಿದೆ. ಐದು ನೈಯಾಪೈಸದ ಕೆಲಸ ಆಗಿಲ್ಲ. ಕಳೆದ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿ, ಜನರಿಗೆ ಮೋಸ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಸುಪ್ರೀಂಕೋರ್ಟ್ ಪೂರ್ಣ ಪ್ರಮಾಣದಲ್ಲಿ ಅವರಿಗೆ ತಡೆಯಾಜ್ಞೆ ನೀಡಿಲ್ಲ. ಅಂತಿಮ ತೀರ್ಪಿಗೆ ಒಳಪಟ್ಟು ಸ್ಪರ್ಧೆಗೆ ಅವಕಾಶ ನೀಡಿದೆ. ಹಾಗಾಗಿ ಗ್ರಾಮಾಂತರದ ಜನತೆ ಬಹಳ ಎಚ್ಚರಿಕೆಯಿಂದ ಮತ ಚಲಾಯಿಸಲು ಮನವಿ ಮಾಡಿದರು.
ಮೆರವಣಿಗೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ರಾಜ್ಯಸಭಾ ಸದಸ್ಯ ಜಗ್ಗೇಶ್, ಡಾ.ಎಂ.ಆರ್.ಹುಲಿನಾಯ್ಕರ್, ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್, ವಿಧಾನಪರಿಷತ್ ಸದಸ್ಯ ಚಿದಾನಂದಗೌಡ ಇತರರು ಪಾಲ್ಗೊಂಡಿದ್ದರು.