ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದೆ. ಉಡುಪಿ ಎರಡನೇ ಸ್ಥಾನ ಪಡೆದಿದ್ದರೆ, ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದಿದೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷ ಮಂಡಳಿ ಅಧಿಕಾರಿಗಳು ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಹೇಳಿದ್ದಾರೆ.
ಕಲಾ ವಿಭಾಗದಲ್ಲಿ ಬೆಂಗಳೂರಿನ ಎನ್ಎಂಕೆಆರ್.ವಿ ಪದವಿ ಪೂರ್ವ ಕಾಲೇಜಿನ ತಬಸ್ಸಮ್ ಶೇಕ್ 593 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಪಡೆದಿದ್ದಾರೆ. ಮೂಡಬಿದರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನನ್ಯ 600 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಜ್ಞಾನಗಂಗೋತ್ರಿ ಪ.ಪೂ.ಕಾಲೇಜಿನ ಕೌಶಿಕ್ ಎಸ್ 596 ಅಂಕ ಮತ್ತು ಬೆಂಗಳೂರು ಆರ್.ವಿ. ಪ.ಪೂ.ಕಾಲೇಜಿನ ಎಸ್.ಸುರಭಿ 596 ಅಂಕಗಳನ್ನು ಗಳಿಸಿ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನಗಳನ್ನು ಪಡೆದಿದ್ದಾರೆ.
ರಾಜ್ಯಾದ್ಯಂತ 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 5, 24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ 74.67ರಷ್ಟು ಫಲಿತಾಂಶ ಪ್ರಕಟವಾಗಿದೆ.
ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು 80.25ರಷ್ಟು ಫಲಿತಾಂಶ ದಾಖಲಾಗಿದೆ. ಬಾಲಕರು 69ರಷ್ಟು ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಶೇ.74.79ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಗರ ಪ್ರದೇಶದಲ್ಲಿ ಶೇ.74.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ 1,34,876 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡ 61.22ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.