ವಿಧಾನಸಭಾ ಚುನಾವಣೆ 2023ರ ಸಂಬಂಧ ಚುನಾವಣಾ ಬಹಿರಂಗ ಪ್ರಚಾರವನ್ನು ನಿಯಂತ್ರಿಸಲು ಹಾಗೂ ಚುನಾವಣೆಯನ್ನು ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಷಿಯಿಂದ ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೂ ತುಮಕೂರು ಜಿಲ್ಲಾದ್ಯಂತ ಅನ್ವಯವಾಗುವಂತೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್. ಪಾಟೀಲ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ನಿಷೇಧಾಜ್ಞೆಯ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯವುದಾಗಲಿ, ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ.
ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಿಗೆ ಮಾಡಬಾರದು. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವುದು ಮಾಡತಕ್ಕದ್ದಲ್ಲ ಎಂದು ಹೇಳಿದ್ದಾರೆ.
ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು, ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ ಎಂದಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ಚುನಾವಣೆ ಆಯೋಗವು ನೀಡಿರುವ ಸ್ಪಷ್ಟೀಕರಣದಮತೆ ಮತದಾನದ ಹಿಂದಿನ 48ಗಂಟೆಯ ಅವಧಿಯಲ್ಲಿ ಅಭ್ಯರ್ಥಿಯು ಮನೆಮನೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ವೇತನಸಹಿತ ರಜೆ ಘೋಷಣೆ:
ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಮತ ಚಲಾಯಿಸಲು ಅನುವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಬುಧವಾರದಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯ ಎಲ್ಲಾ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಬ್ಯಾಂಕುಗಳು, ಇತರೆ ಬ್ಯಾಂಕುಗಳು, ಮುಂತಾದ ಕಚೇರಿಗಳಿಗೆ ಸೀಮಿತಗೊಳಿಸಿ ಸರ್ಕಾರ ಸಾರ್ವಜನಿಕ ರಜೆಯನ್ನು ಘೋಷಿಸಿರುತ್ತದೆ.
ಯಾವುದೇ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಅಥವಾ ಇನ್ನಿತರ ಸಾರ್ವಜನಿಕ ಸಂಸ್ಥೆಗಳಲ್ಲಿ ಕಾಯಂ ಮತ್ತು ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಮತದಾನ ದಿನದಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿ ಪಾಟೀಲ್ ತಿಳಿಸಿದ್ದಾರೆ.