ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021 ಪ್ರಕ್ರಿಯೆಯನ್ನು ತ್ವರಿತಗೊಳಸಿ, ಆದೇಶ ಪ್ರತಿಗಳನ್ನು ನೀಡಬೇಕೆಂದು ಆಗ್ರಹಿಸಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಬಳಗದ ಮುಂದಾಳತ್ವದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಲಾಯಿತು.
ಮಾರ್ಚ್ 12, 2022 ರಿಂದ 16 ಮಾರ್ಚ್ 2022ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಪರೀಕ್ಷೆ ನಡೆದಿದ್ದು, ಮಾರ್ಚ್ 7, 2023 ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. ಹಾಗೆಯೇ ಜೂನ್ 12, 2023ರಂದು ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ತಲುಪಿಸಿದೆ. ಆದರೂ ನೇಮಕಾತಿ ಪ್ರಕ್ರಿಯ ನೆನೆಗುದಿಗೆ ಬಿದ್ದಿದೆ ಎಂದು ಸಹಾಯಕ ಪ್ರಾಧ್ಯಾಪಕರ ಆಯ್ಕೆ ಅಭ್ಯರ್ಥಿಗಳು ನೋವು ತೋಡಿಕೊಂಡಿದ್ದಾರೆ.
ಘನ ನ್ಯಾಯಾಲಯದ ಅಂತಿಮ ತೀರ್ಪಿನ ನಿಬಂಧನೆಗೆ ಒಳಪಟ್ಟು ಮುಂದಿನ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದಷ್ಟು ವಿಳಂಬ ಮಾಡದೆಯೇ ಬಹೆಹರಿಸುವ ಕುರಿತು ಮುಂದಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿಯೂ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ಇದ್ದರೂ ಸಹ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುತ್ತಾರೆ. ಆದರೆ ಆದೇಶವನ್ನು ಮಾತ್ರ ನೀಡಿರುವುದಿಲ್ಲ. ನಮಗೂ ಸಹ ಇದೇ ರೀತಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿ ಷರತ್ತುಬದ್ಧ ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.
ನೇಮಕಾತಿ ಪ್ರಕ್ರಿಯನ್ನು ಚುರುಕುಗೊಳಿಸಿ ಆದೇಶ ಪ್ರತಿಯನ್ನು ನೀಡಿ ನಮ್ಮ ಜೀವನಕ್ಕೆ ಒಂದು ಭದ್ರತೆಯನ್ನು ನೀಡಬೇಕು. ತುಮಕೂರು ಜಿಲ್ಲೆಯ ನೊಂದ ಅಂತಿಮ ಆಯ್ಕೆ ಪಟ್ಟಿಯಲ್ಲಿನ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಅಭ್ಯರ್ಥಿಗಳಾದ ರಮೇಶ್, ಖಾಲಿದ್ ಖಾನಂ, ಸವಿತಾ, ಮಧುಸೂದನ್, ಗಾದಿಲಿಂಗಪ್ಪ, ಗೌತಮ್, ಸತೀಶ್, ಒಂಕಾರ್, ಚಂದನ್, ಅರುಣ್ ಕುಮಾರ್ ಇದ್ದರು.