ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿಗಳ ಚುನಾವಣೆಯ ವೇಳೆ ನಡೆದ ಘರ್ಷಣೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಚುನಾವಣಾ ಹಿಂಸಾಚಾರದಲ್ಲಿ ತೃಣಮೂಲ ಕಾಂಗ್ರೆಸ್ ನ 5 ಮಂದಿ, ಎಡಪಕ್ಷಗಳ ಇಬ್ಬರು ಕಾರ್ಯಕರ್ತರು ಹಾಗೂ ಓರ್ವ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ 22 ಜಿಲ್ಲಾ ಪರಿಷತ್ ಗಳು, 9,730 ಪಂಚಾಯಿತಿ ಸಮಿತಿಗಳು ಹಾಗೂ 63,229 ಗ್ರಾಮ ಪಂಚಾಯ್ತಿಗಳಿಗೆ ಇಂದು ಮತದಾನ ನಡೆಯುತ್ತಿದ್ದು ಕೆಲವು ಕಡೆಗಳಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. ಹಲವರು ಗಾಯಗೊಂಡಿದ್ದು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಪಶ್ಚಿಮ ಬಂಗಾಳದ ಡೊಮ್ ಕಲ್ ಪ್ರದೇಶದ ಕೊಲಬೇಡಿಯದ ಬೂತ್ ನಂಬರ್ 23 ರಲ್ಲಿ ಸರದಿ ಸಾಲಿನಲ್ಲಿ ನಿಲ್ಲದೆ ಕೆಲವರು ಮಧ್ಯ ತೂರಿಕೊಂಡ ಪರಿಣಾಮ ಟಿಎಂಸಿ ಮತ್ತು ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ನಾಡಿಯಾ, ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.