ಕೊಬ್ಬರಿ ಬೆಳೆಗಾರರ ಹಿತ ಕಾಯುವಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 1 ರಿಂದ 16ರವರೆಗೆ ತೆಂಗು ಬೆಳೆಯುವ ಎಲ್ಲಾ ತಾಲ್ಲೂಕುಗಳಲ್ಲಿ ಬಂದ್ ಮಾಡಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಂಗು ಬೆಳೆಯುವ ಸುಮಾರು 33 ತಾಲ್ಲೂಕು ಕೇಂದ್ರಗಳಲ್ಲಿಯೂ ಬಂದ್ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದಕ್ಕೆ ಸಾರ್ವಜನಿಕರು, ಕೊಬ್ಬರಿ ಮತ್ತು ತೆಂಗು ಬೆಳೆಗಾರರು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ತೆಂಗು ಬೆಳೆಯಲು ಉಪಯೋಗಿಸುವ ಉಪಕರಣಗಳು, ಗೊಬ್ಬರ, ರಾಸಾಯನಿಕ ವಸ್ತುಗಳ ಬೆಲೆ ಸಾಕಷ್ಟು ಹೆಚ್ಚಾಗಿದೆ. ಆದರೆ ಕೊಬ್ಬರಿ ಬೆಲೆ ಮಾತ್ರ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈಗ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ 7,500 ರೂ ಇದೆ. ಹೀಗಾಗಿ ತೆಂಗು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಆದರೂ ಸಹ ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲೀ ಕೊಬ್ಬರಿ ಬೆಳೆಗಾರರ ನೆರವಿಗೆ ಬಂದಿಲ್ಲ ಎಂದು ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಕೊಬ್ಬರಿ ಸೇರಿದಂತೆ ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಇಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟದ ನಡುವೆ ಯುಪಿಎ ಮತ್ತು ಎನ್.ಡಿ.ಎ ಮಿತ್ರ ಪಕ್ಷಗಳು ಲೋಕಸಭಾ ಚುನಾವಣೆ ಗೆಲ್ಲಲು ತಂತ್ರ, ಪ್ರತಿತಂತ್ರ ರೂಪಿಸಲು ಸಭೆ ನಡೆಸುತ್ತಿದ್ದಾರೆ. ರೈತರ ಬಗ್ಗೆ ಯಾವುದೇ ಪಕ್ಷಗಳು ಗಮನಹರಿಸುತ್ತಿಲ್ಲ ಎಂದು ದೂರಿದರು.
ಆಗಸ್ಟ್ 15ರೊಳಗೆ ಕೊಬ್ಬರಿಗೆ ತೋಟಗಾರಿಕಾ ಇಲಾಖೆ ಶಿಫಾರಸು ಮಾಡಿರುವ 16,730 ರೂ ಬೆಂಬಲ ಬೆಲೆ ಘೋಷಣೆ ಮಾಡದಿದ್ದರೆ ಆಗಸ್ಟ್ 16 ರಿಂದ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಸುಮಾರು 10 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಆದರೆ 20 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕುಸಿದಿದೆ. ಹೀಗಾಗಿ ಕೂಡಲೇ ಸರ್ಕಾರ ಮಳೆ ಕೊರತೆ ಇರುವ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಬೇಕು. ಜೊತೆಗೆ ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.
ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಉಪಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ಕೆಂಕೆರೆ ಸತೀಶ್ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ , ಗೌರವಾಧ್ಯಕ್ಷ ಧನಂಜಯ ಆರಾಧ್ಯ, ಕೊಡ್ಲಹಳ್ಳಿ ಸಿದ್ದರಾಜು, ಅನಿಲ್ ಕುಮಾರ್, ಮಲ್ಲಿಕಾರ್ಜುನಯ್ಯ, ಸಣ್ಣ ದ್ಯಾಮೇಗೌಡ, ಲೋಕೇಶ್, ರುದ್ರೇಶ್ ಗೌಡ, ಸತೀಶ್ ಇದ್ದರು.


