ನಮ್ಮ ರಾಜ್ಯದ ಮಕ್ಕಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿ ಸಿದ್ದಗೊಳಿಸಬೇಕು. ಅದಕ್ಕಾಗಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸರ್ಕಾರ ಚಿಂತನೆಯನ್ನು ನಡೆಸಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ – ಬಾಧಕಗಳ ಕುರಿತು ಚರ್ಚಿಸಲಾಯಿತು. ರಾಜ್ಯದ ಶಿಕ್ಷಣ ನೀತಿಯ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಕರ್ನಾಟಕದ ಶಿಕ್ಷಣ ವ್ಯವಸ್ಥೆಯು ದೇಶಕ್ಕೆ ಮಾದರಿಯಾಗಿದೆ. ಅದಕ್ಕಾಗಿಯೇ ಬೆಂಗಳೂರು ಇಂದು ಐಟಿ ರಾಜಧಾನಿಯಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಿಂದಾಗಿ ರಾಜ್ಯದ ಹಲವಾರು ಜನರು ದೇಶ – ವಿದೇಶದಲ್ಲಿ ಉತ್ತಮ ಸ್ಥಾನಗಳಲ್ಲಿದ್ದಾರೆ ಎಂದು ಹೇಳಿದ್ದಾರೆ.
ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು ಮರಳಿ ಜಾರಿಗೊಳಿಸುವ ಭರವಸೆ ನೀಡಿದ್ದೇವೆ ಮತ್ತು ಆ ಭರವಸೆಗೆ ನಾವು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಇದುವರೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗಿಲ್ಲ. ಆದರೆ, ಕರ್ನಾಟಕದಲ್ಲಿ ಎನ್‌ಇಪಿಯನ್ನು ಮೊದಲು ತರಾತುರಿಯಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿದರು.
ಶಿಕ್ಷಣದಲ್ಲಿ ಯಾವುದೇ ನೀತಿಯನ್ನು ಅನುಷ್ಟಾನಕ್ಕೆ ತರುವುದೇ ಆದರೇ ಪ್ರಾಥಮಿಕ ಶಿಕ್ಷಣದಿಂದ ಆರಂಭವಾಗಬೇಕು. ಆದರೆ ಆ ಕೆಲಸ ನಮ್ಮ ರಾಜ್ಯದಲ್ಲಿ ಆಗಿಲ್ಲ. ನಮ್ಮ ರಾಜ್ಯದಲ್ಲಿ ಎನ್‌ಇಪಿಯನ್ನು ನಾವು ಮುಂದಕ್ಕೆ ಅನ್ವಯಿಸುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ನಾವು ಪ್ರತ್ಯೇಕವಾಗಿ ಒಂದು ಸಮಿತಿ ರಚಿಸುತ್ತೇವೆ. ಇಂದಿನ ಹೊಸ ಪೀಳಿಗೆಗೆ ಅನುಕೂಲವಾಗುವ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವ ಕುರಿತಾಗಿ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದಿದ್ದಾರೆ.