ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಕುಡಿಯುವ ನೀರಿಗೂ ಜನತೆ ಪರದಾಡುತ್ತಿದ್ದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ತೆಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಎಂದರು.
ತಮಿಳುನಾಡಿನಲ್ಲಿ ಯಾವುದೇ ಬೆಳೆ ಒಣಗಿಲ್ಲ. ಮೆಟ್ಟೂರು, ಭವಾನಿ ಮತ್ತು ಗ್ರಾಂಡ್ ಅಣೆಕಟ್ಟೆಗಳಲ್ಲಿ ಸಾಕಷ್ಟು ನೀರಿದೆ. ಇಷ್ಟಿದ್ದರೂ ಸಂಕಷ್ಟ ಸೂತ್ರದ ಅಡಿಯಲ್ಲಿ ನೀರು ಹರಿಸುವ ಮೂಲಕ ರಾಜಕೀಯ ತೆವುಲು ತೀರಿಸಿಕೊಳ್ಳಲು ಹೊರಟಿದೆ ಎಂದು ಟೀಕಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದ ಹಾರಂಗಿ, ಹೇಮಾವತಿ ಮತ್ತು ಕೃಷ್ಣರಾಜ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದ ಮಳೆಯಾಗಿಲ್ಲ. ಹೀಗಾಗಿ ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಛಾಯೆ ದಟ್ಟವಾಗಿದೆ. ಪರಿಸ್ಥಿತಿ ಹೀಗಿದ್ದರೂ ದಿನಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
ಇಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಕ್ವಿಂಟಾಲ್ ಕೊಬ್ಬರಿಗೆ 20 ಸಾವಿರ ರೂಪಾಯಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕು. ಹಂತಹಂತವಾಗಿ ಹೋರಾಟ ರೂಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ ಕೃಷಿ ಕಾಯ್ದೆ ರದ್ದು ಮಾಡಲು ಸರ್ಕಾರ ನಿರ್ಧಾರ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ, ಕರ್ನಾಟಕದಲ್ಲಿ ಆಗಸ್ಟ್ ತಿಂಗಳಲ್ಲಿ ಮಳೆ ತೀರ ಕಡಿಮೆ ಬಿದ್ದಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಕುಡಿಯುವ ನೀರಿಗೂ ಜನರು ಹಾಹಾಕಾರ ಪಡುವ ಕಾಲ ದೂರವಿಲ್ಲ. ಇಂತಹ ಸಂದರ್ಭದಲ್ಲೂ ಇಂಡಿಯಾ ಮೈತ್ರಿಕೂಟದ ರಾಜಕೀಯ ನಾಯಕರನ್ನು ಸಮಾಧಾನ ಪಡಿಸಲು, ರಾಜ್ಯದ ಹಿತ ಕಡೆಗಣಿಸಿ ನೀರು ಹರಿಸಲಾಗುತ್ತಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜುನಾಥಗೌಡ, ಉಪಾಧ್ಯಕ್ಷ ಕೆಂಕೆರೆ ಸತೀಶ್, ರಾಘವೇಂದ್ರ ಶಿರಸಿ, ಉಮೇಶ್ ಪಾಟೀಲ್, ಭೈರೇಗೌಡ, ಧನಂಜಯ ಆರಾಧ್ಯ ಮೊದಲಾದವರು ಭಾಗವಹಿಸಿದ್ದರು.


