Friday, November 22, 2024
Google search engine
Homeಚಳುವಳಿತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಯಶಸ್ವಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಯಶಸ್ವಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ಬಂದ್ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ದಕ್ಷಿಣ ಕರ್ನಾಟಕ ಸಂಪೂರ್ಣ ಸ್ಥಬ್ದವಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ರಾಮನಗರ, ಚಾಮರಾಜ ನಗರ, ಚಿತ್ರದುರ್ಗ, ಬಳ್ಳಾರಿ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾಯಿತು.

ಬಂದ್ ಹಿನ್ನೆಲೆಯಲ್ಲಿ ಖಾಸಗಿ ಮತ್ತು ಕೆಎಸ್ ಆರ್.ಟಿಸಿ ಬಸ್ ಸಂಚಾರ, ಆಟೋ ಸಂಚಾರ ಸಂಪೂರ್ಣ ಸ್ಥಬ್ದವಾಗಿತ್ತು. ಹೋಟೆಲ್ ಗಳನ್ನು ಮುಚ್ಚಲಾಗಿತ್ತು. ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಊಬರ್ ಚಾಲಕರು ಮತ್ತು ಮಾಲಿಕರು ವಾಹನಗಳನ್ನು ರಸ್ತೆಗೆ ಇಳಿಸದೇ ಇರುವುದು ಕಂಡು ಬಂತು.

ಕರ್ನಾಟಕ ಬಂದ್ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 22 ವಿಮಾನಗಳ ಹಾರಾಟವನ್ನು ನಿಲ್ಲಿಸಲಾಗಿತ್ತು. ಹೀಗಾಗಿ ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಿತು.

ಖಾಸಗಿ ಶಾಲಾ ಕಾಲೇಜುಗಳ ಸಂಘ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನರ ಓಡಾಟ ವಿರಳವಾಗಿತ್ತು. ಪ್ರತಿಯೊಂದು ಜಿಲ್ಲೆಯಲ್ಲೂ ವಾಹನಗಳು ರಸ್ತೆಗೆ ಇಳಿಯದೇ ಇದ್ದುದರಿಂದ ಪ್ರಯಾಣಿಕರು ಗ್ರಾಮಗಳಿಗೆ ಹೋಗಲು ಪರದಾಡುವಂತಾಯಿತು.

ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕನ್ನಡಪರ ಮತ್ತು ರೈತ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು -ಬೆಂಗಳೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಕರಾವಳಿ ಕರ್ನಾಟಕ, ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬಂದ್ ನಡೆಸದಿದ್ದರೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯದಾದ್ಯಂತ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಮೆರವಣಿಗೆಯಲ್ಲಿ ಎಮ್ಮೆಗಳನ್ನು ಕರೆ ತಂದು ಪ್ರತಿಭಟನೆ ನಡೆಸಿದರು. ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ತಲೆ ಮೇಲೆ ಚಪ್ಪಡಿ ಕಲ್ಲುಗಳನ್ನು ಹೊತ್ತು ವಿಭಿನ್ನವಾಗಿ ಪ್ರತಿಭಟಿಸಿದರು. ತಲೆ ಮೇಲೆ ಸಗಣಿ ನೀರನ್ನು ಸುರಿದುಕೊಂಡ ದೃಶ್ಯಗಳು ಕಂಡು ಬಂದವು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular