ಕೇರಳದ ಕಲಮಸ್ಸೆರಿ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ ಸಂಭವಿಸಿದ್ದು ಸ್ಥಳದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬಾಲಕ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇರಳ ಮುಖ್ಯಮಂತ್ರಿ ಸರಣಿ ಸ್ಫೋಟವನ್ನು ಗಂಭೀರ ಮತ್ತು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾನುವಾರ ತಿರುವನಂತಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸರಣಿ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಿಣರಾಯಿ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಮಹಿಳೆಯೊಬ್ಬಳ ಸಾವಿಗೆ ಕಾರಣವಾದ ಸ್ಫೋಟದ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು.
ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರ್ನಾಕುಲಂ ಪೊಲೀಸರು ಕಲಮಸ್ಸೆರಿಯಲ್ಲಿ ಸ್ಫೋಟದ ಸ್ಥಳಕ್ಕೆ ತಲುಪಿದ್ದಾರೆ. ಡಿಜಿಪಿ ಎರ್ನಾಕುಲಂಗೆ ತೆರಳುತ್ತಿದ್ದಾರೆ. ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಪಿಣರಾಯಿ ಹೇಳಿದರು.
ಪೊಲೀಸರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ತನಿಖಾ ತಂಡದಿಂದ ಹೆಚ್ಚಿನ ಮಾಹಿತಿ ಬರಬೇಕಿದೆ ಎಂದು ಪಿಣರಾಯಿ ಸ್ಪಷ್ಟಪಡಿಸಿದ್ದಾರೆ.