ರಾಜ್ಯದಲ್ಲಿ ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟೀಕೆ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಗೆ ಬರ ಅಧ್ಯಯನ ನಡೆಸಲು ಆಗಮಿಸಿದ ಸಂದರ್ಭದಲ್ಲಿ ನಗರದಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಅನಗತ್ಯ ಉಚಿತ ಭಾಗ್ಯಗಳನ್ನು ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ಇದಕ್ಕೆ ಉದಾಹರಣೆಯಾಗಿ ಗೃಹ ಸಚಿವರ ಕ್ಷೇತ್ರದಲ್ಲಿ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ರಾಜ್ಯ ಸರ್ಕಾರದ ಬೊಕ್ಕಸ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವುದು ತಿಳಿಯುತ್ತದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದರೂ ಸಹ ಬರ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿಲ್ಲ. ರೈತರ ಬಳಿಗೆ ಹೋಗಿ ಅವರು ನೋವು-ನಲಿವನ್ನು ಆಲಿಸಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ನೀಡುತ್ತಿಲ್ಲ. ತೆರಿಗೆ ಜಾಸ್ತಿ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.