Sunday, September 8, 2024
Google search engine
Homeಮುಖಪುಟಸುಳ್ಳು ಹರಿಯಬಿಟ್ಟ ಮಾಜಿ ಸಿಎಂ ಕುಮಾರಸ್ವಾಮಿ - ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸುಳ್ಳು ಹರಿಯಬಿಟ್ಟ ಮಾಜಿ ಸಿಎಂ ಕುಮಾರಸ್ವಾಮಿ – ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ತಾ ಕಳ್ಳ ಇತರರ ನಂಬ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.

ಫೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು.

ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದು ಹೇಳಿದ್ದಾರೆ.

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿದು ಕಾಮಾಲೆ ಕಣ್ಣು

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ ಎಂದು ಹೇಳಿದ್ದಾರೆ.

ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದಿದ್ದಾರೆ.

ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular