Friday, October 18, 2024
Google search engine
Homeಜಿಲ್ಲೆಕಾಡುಗೊಲ್ಲರಿಗೆ ಎಸ್.ಟಿ.ಮೀಸಲಾತಿ ನೀಡುವಂತೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

ಕಾಡುಗೊಲ್ಲರಿಗೆ ಎಸ್.ಟಿ.ಮೀಸಲಾತಿ ನೀಡುವಂತೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

ಕಾಡುಗೊಲ್ಲರಿಗೆ ಎಸ್.ಟಿ. ಮೀಸಲಾತಿ ನೀಡಬೇಕು, ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿ ಕಾಡುಗೊಲ್ಲರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಒಂದು ದಿನದ ಶಾಂತಿಯುತ ಪ್ರತಿಭಟನೆ ನಡೆಸಿದರು.

ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಮಾತನಾಡಿ, ಬುಡಕಟ್ಟು ಸಂಸ್ಕೃತಿಯ ಕಾಡುಗೊಲ್ಲರು ಇನ್ನೂ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ, ಈ ಕಾರಣದಿಂದ ಇವರು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ತೀರಾ ಹಿಂದುಳಿದ ಕಾಡುಗೊಲ್ಲರಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ನೀಡಿ ಸರ್ಕಾರದ ಸವಲತ್ತು ದೊರಕಿಸಲು ನೆರವಾಗಬೇಕು ಎಂದು ಆಗ್ರಹಿಸಿದರು.

ಕಾಡುಗೊಲ್ಲರ ಜಾತಿಯನ್ನು ಅಂಗೀಕರಿಸಿ ಸರ್ಕಾರ 2018ರಲ್ಲೇ ಆದೇಶ ಮಾಡಿದ್ದರೂ ಕಚೇರಿಗಳಲ್ಲಿ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ, ಇದರಿಂದ ಸಮುದಾಯದ ಮಕ್ಕಳ ವಿದ್ಯಾಭ್ಯಾಸ ಹಾಗೂ ಉದ್ಯೋಗದ ಭವಿಷ್ಯಕ್ಕೆ ತೊಂದರೆ ಆಗುತ್ತಿದೆ. ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಆದೇಶ ನೀಡಬೇಕು. ಕಾಂತರಾಜು ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಕಾಡುಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಿ ಮೂಲಭೂತ ಸೌಲಭ್ಯ ಒದಗಿಸಬೇಕು. ಕಾಡುಗೊಲ್ಲರ ಅಭಿವೃದ್ಧಿ ನಗಮಕ್ಕೆ ಅದ್ಯಕ್ಷರನ್ನು ನೇಮಕ ಮಾಡಿ ಅನುದಾನ ನೀಡಿ ಸಮುದಾಯದ ನೆರವಿಗೆ ಸಹಕರಿಸಬೇಕು. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಡಿ.ಕೆ.ಗಂಗಾಧರ್ ಮಾತನಾಡಿ, ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವ ಕಾಡುಗೊಲ್ಲರಿಗೆ ನ್ಯಾಯಯುತವಾದ ಸೌಕರ್ಯಗಳನ್ನು ನೀಡಬೇಕು. ಕಾಡುಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿ ಕುಡಿಯುವ ನೀರು, ರಸ್ತೆ, ವಿದ್ಯುತ್, ಶಾಲೆ ಮತ್ತಿತರ ಮೂಲಭೂತ ಸವಲತ್ತುಗಳನ್ನು ಒದಗಿಸಬೇಕು ಎಂದರು.

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮಾತನಾಡಿ, ಹಲವು ವರ್ಷಗಳಿಂದ ಕಾಡುಗೊಲ್ಲರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸಮುದಾಯದ ಸಂಕಷ್ಟಗಳನ್ನು ಸರ್ಕಾರ ಅರಿತು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರ ಗಮನಕ್ಕೆ ಕಾಡುಗೊಲ್ಲರ ಬೇಡಿಕೆಗಳನ್ನು ತಂದು, ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಘದ ಗೌರವಾಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ಭದ್ರೇಗೌಡ, ಮುಖಂಡರಾದ ಜಿ.ಕೆ.ನಾಗಣ್ಣ, ಚಿಕ್ಕಪ್ಪಯ್ಯ, ಜಯಣ್ಣ, ಅನಂತು, ದೊಡ್ಡವೀರಯ್ಯ, ರಾಮಣ್ಣ, ಮಂಜುನಾಥ್, ಶಿವಕುಮಾರ್, ತಿಮ್ಮಯ್ಯ, ಮೋಹನ್ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular