ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಎಲ್ಲಾದರೂ ಮೀಟರ್ ಬಡ್ಡಿ ದಂಧೆ ನಡೆಸುತ್ತಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೀಟರ್ ಬಡ್ಡಿ ದಂಧೆ ಒಂದು ಕುಟುಂಬವನ್ನೇ ಬಲಿಪಡೆದುಕೊಂಡಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸಬಾರದು. ಹಾಗಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿರುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ತನಿಖೆಯ ನಂತರ ಎಲ್ಲಾ ವಿಚಾರಗಳು ಬಯಲಿಗೆ ಬರಲಿವೆ. ಇಂತಹ ಹೃದಯವಿದ್ರಾವಕ ಘಟನೆ ಮತ್ತೆ ಮರುಕಳಿಸಬಾರದು. ಇಂತಹ ಘಟನೆಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವರ್ಗಾವಣೆ ದಂಧೆ ಗಮನಕ್ಕೆ ಬಂದಿಲ್ಲ
ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅಂತಹದು ಏನಾದರೂ ನಡೆದಿರುವುದನ್ನು ನನ್ನ ಗಮನಕ್ಕೆ ತಂದರೆ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ನಿನ್ನೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಪರಮೇಶ್ವರ್ ಮೃತರ ತಂದೆ, ತಾಯಿ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು.