ಪೊಲೀಸರ ವೇತನ ಹೆಚ್ಚಳದ ಕುರಿತು ಔರಾದ್ಕರ್ ವರದಿ ನೀಡಿದ್ದು, ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ವರದಿ ಸಂಪೂರ್ಣ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರು ನಗರದ ಬಾರ್‌ಲೈನ್‌ನಲ್ಲಿರುವ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿದ ನಂತರ ಅವರು ಮಾತನಾಡಿ, ಔರಾದ್ಕರ್ ವರದಿ ಸಂಪೂರ್ಣ ಅನುಷ್ಟಾನ ಆಗಿಲ್ಲ. ಸಂಪೂರ್ಣ ಅನುಷ್ಟಾನಗೊಳಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
11ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಕೊರತೆಯಿದೆ ಎಂಬ ಅಂಶ ಪೊಲೀಸ್ ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲೆಗೆ 1600 ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಕಚೇರಿಯ ಗಮನಕ್ಕೆ ತಂದಿದ್ದೇನೆ ಎಂದರು.
ಪೊಲೀಸ್ ಠಾಣೆಗಳ ವಸ್ತುಸ್ಥತಿ ತಿಳಿಯಲು ಠಾಣೆಗೆ ದಿಢೀರ್ ಭೇಟಿ ನೀಡಿ, ಅಂಕಿ-ಅಂಶಗಳನ್ನು ಪರಿಶೀಲಿಸಿದೆ. ಕಳ್ಳತನ, ಟ್ರಾಫಿಕ್, ಅಪರಾಧ, ಜೂಜು ಪ್ರಕರಣಗಳು ಈ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿರುವುದು ಕಂಡು ಬಂದಿದೆ. ಈ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೊರೊನಾ ಸಂಬಂಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕೈಗೊಳ್ಳಲಾಗಿರುವ ಹಾಸಿಗೆ ವ್ಯವಸ್ಥೆ, ಪರೀಕ್ಷೆಗಳ ಬಗ್ಗೆ ಮಾಹಿತಿ ಪಡೆದರು.