ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯವತಿ ಹೇಳಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಯಾವ ಪಕ್ಷದ ಜೊತೆಗೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯವತಿ, ಕೆಲ ಮಾಧ್ಯಮಗಳಲ್ಲಿ ತಾವು ರಾಜಕೀಯ ನಿವೃತ್ತಿಯಾಗುವ ಸಂಬಂಧ ಬಂದಿರುವ ವರದಿಗಳನ್ನು ಅವರು ತಳ್ಳಿ ಹಾಕಿದ್ದಾರೆ.
ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆಯ ಬಳಿಕ ಯಾವ ಪಕ್ಷದೊಂದಿಗೆ ಹೋಗಬೇಕು ಎಂಬುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಬಹುಜನ ಸಮಾಜ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.