Tuesday, November 12, 2024
Google search engine
Homeಮುಖಪುಟಶಿವಕುಮಾರಶ್ರೀಗೆ ಭಾರತ ರತ್ನ ನೀಡಬೇಕು - ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

ಶಿವಕುಮಾರಶ್ರೀಗೆ ಭಾರತ ರತ್ನ ನೀಡಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

ಶಿವಕುಮಾರ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಕರ್ನಾಟಕ ರತ್ನ ಶತಾಯುಷಿ ಡಾ.ಶಿವಕುಮಾರ ಶ್ರೀಗಳ ಸ್ಮರಣಾರ್ಥ ನಿರ್ಮಿಸಿರುವ ಸ್ಮೃತಿ ವನವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ. ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಪ್ರತಿಪಾದಿಸಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಶ್ರೀಗಳ ಬದುಕಿನ ಆಚರಣೆಯೇ ಕಾರಣ ಎಂದು ಹೇಳಿದರು.

ನಂಜುಂಡಪ್ಪ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದು ತಿಳಿಸಿದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular