ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಭಾರತೀಯ ಜನತಾ ಪಕ್ಷಕ್ಕೆ ಮರಳಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಶೆಟ್ಟರ್ ಕೆಲ ಕಾಲ ಚರ್ಚೆ ನಡೆಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ಕೂಡ ಇದ್ದರು.
ಕಾಂಗ್ರೆಸ್ ಪಕ್ಷದಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ಜಗದೀಶ್ ಶೆಟ್ಟರ್ ಒಂದೆರೆಡು ದಿನಗಳಲ್ಲಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಶೆಟ್ಟರ್, ವಿಧಾನಸಭಾ ಚುನಾವಣೆ ಸಮಯದಲ್ಲಿ ಕೆಲವು ಕಾರಣಗಳಿಂದ ಭಾರತೀಯ ಜನತಾ ಪಕ್ಷವನ್ನು ಬಿಡಬೇಕಾಯಿತು. ನಂತರ ಬಿಜೆಪಿ ನಾಯಕರು ಮರಳಿ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮರಳಿ ಮಾತೃ ಪಕ್ಷವನ್ನು ಸೇರಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಚನ್ನಾಗಿ ನಡೆಸಿಕೊಂಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.


