ರಾಜ್ಯದ ಎಲ್ಲಾ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದ್ದು 32 ಮಂದಿ ಶಾಸಕರು ಹಾಗೂ 39 ಮಂದಿ ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ.
ಕೆ.ಎಸ್.ಡಿ.ಎಲ್ ನಿಗಮಕ್ಕೆ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಶಾಸಕ ರಾಜು ಕಾಗೆ ಅವರಿಗೆ ಹುಬ್ಬಳ್ಳಿ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರನ್ನು ಅಧ್ಯಕ್ಷರನ್ನಾಗಿ, ಶಾಸಕ ಹೆಚ್.ವೈ. ಮೇಟಿ ಅವರಿಗೆ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರೆ, ಅರಣ್ಯ ಅಭಿವೃದ್ಧಿ ನಿಗಮಕ್ಕೆ ಬಸವರಾಜ್ ನೀಲಪ್ಪ ಶಿವಣ್ಣವರ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಆಹಾರ ಮತ್ತು ನಾಗರೀಕ ನಿಗಮಕ್ಕೆ ಶಾಸಕ ಬಿ.ಜಿ.ಗೋವಿಂದಪ್ಪ ಅಧ್ಯಕ್ಷರಾಗಿದ್ದಾರೆ. ಅಬ್ಬಯ್ಯ ಪ್ರಸಾದ್ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಕರ್ನಾಟಕ ಗೃಹ ಮಂಡಳಿಗೆ ಶಾಸಕ ಶಿವಲಿಂಗೇಗೌಡ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದರೆ, ಶಾಸಕ ನರೇಂದ್ರಸ್ವಾಮಿ ಅವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆಯನ್ನು ನೀಡಲಾಗಿದೆ.
ಶಾಸಕ ಹ್ಯಾರಿಸ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆ ನೀಡಲಾಗಿದೆ. ಸಿ.ಪುಟ್ಟರಂಗಶೆಟ್ಟಿ ಅವರಿಗೆ ಎಂಎಸ್ಐಎಲ್ ಅಧ್ಯಕ್ಷ ಹುದ್ದೆ ಕೊಡಮಾಡಲಾಗಿದೆ.
ಜಿ.ಎಸ್. ಪಾಟೀಲ್ ಅವರಿಗೆ ಖನಿಜ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ್ ಅವರಿಗೆ ಹಣಕಾಸು ಅಧ್ಯಕ್ಷ ಹುದ್ದೆ ನೀಡಲಾಗಿದೆ.
ರಾಜಾ ವೆಂಕಟಪ್ಪ ನಾಯಕ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ಮಾಡಿದೆ. ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಕರ್ನಾಟಕ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದರೆ, ವಿನಯ್ ಕುಲಕರ್ಣಿ ಅವರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಶ್ರೀನಿವಾಸ್ ಮಾನೆ ಅವರನ್ನು ಡಿಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಿದೆ. ಜೆ.ಶಿವಣ್ಣ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ.