Friday, November 22, 2024
Google search engine
Homeಮುಖಪುಟಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ - ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ – ಸಿಎಂ ಸಿದ್ದರಾಮಯ್ಯ

ಸರ್ಕಾರದ ಬಳಿ ಹಣವಿಲ್ಲ, ಖಜಾನೆ ಖಾಲಿಯಾಗಿದೆ. ಇದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ ಎಂಬ ಪ್ರತಿಪಕ್ಷಗಳ ಮುಖಂಡರಿಗೆ ತುಮಕೂರು ಕಾರ್ಯಕ್ರಮ ಉತ್ತರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 657 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಾಗೂ ಪಂಚ ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ 3 ಲಕ್ಷ 20 ಸಾವಿರ ಕೋಟಿ ರೂಪಾಯಿಗಳ ಬಜೆಟ್ ಮಂಡನೆ ಮಾಡಿದ್ದೆ. ಈ ಬಾರಿ ಅಂದರೆ 2024-25ನೇ ಸಾಲಿನಲ್ಲಿ 3 ಲಕ್ಷ 80 ಸಾವಿರ ಕೋಟಿ ರೂಪಾಯಿ ಬಜೆಟ್ ಮಂಡಿಸಲು ಯೋಜನೆ ನಡೆಯುತ್ತಿದೆ. ಇಷ್ಟು ಗಾತ್ರದ ಬಜೆಟ್ ಮಂಡನೆ ಮಾಡುತ್ತೇವೆ ಎಂದರೆ ಅಭಿವೃದ್ಧಿ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿಲ್ಲವೇ ಎಂದು ತಿಳಿಸಿದರು.

2024 ರ ಮೇ ತಿಂಗಳಲ್ಲಿ ನಾನು ಅಧಿಕಾರ ವಹಿಸಿಕೊಂಡ ನಂತರ 8 ತಿಂಗಳಲ್ಲಿ 38 ಸಾವಿರ ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿದ್ದೇವೆ. ಬೇರೆಬೇರೆ ಕಡೆಗಳಿಂದ ಸಂಪನ್ಮೂಲಗಳ ಕ್ರೂಢೀಕರಣವೂ ಆಗುತ್ತಿದೆ. 2024-25ನೇ ಸಾಲಿನಲ್ಲಿ 58 ಸಾವಿರ ಕೋಟಿ ರೂಗಳನ್ನು ಗ್ಯಾರಂಟಿಗಳಿಗಾಗಿ ಹಣ ನೀಡಬೇಕಾಗಿದೆ. ಐದು ವರ್ಷಗಳ ಕಾಲ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿದರು.

ಎಲ್ಲಾ ಜಾತಿ, ಧರ್ಮಗಳ ಬಡವರಿಗಾಗಿ ಕಾಂಗ್ರೆಸ್ ಸರ್ಕಾರ ಕೆಲಸಗಳನ್ನು ಮಾಡುತ್ತಿದೆ. ಹಿಂದ 2014 ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದಾಗ 165 ಭರವಸೆಗಳನ್ನು ಜನರಿಗೆ ಕೊಟ್ಟಿದ್ದೆವು. ಅದರಲ್ಲಿ 156 ಭರವಸೆಗಳನ್ನು ಈಡೇರಿಸಿದ್ದೇವೆ. ಅನ್ನಭಾಗ್ಯ, ಶಾದಿಭಾಗ್ಯ, ಶೂಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಹಲವು ಭಾಗ್ಯಗಳು ಎಲ್ಲಾ ಜಾತಿ, ಧರ್ಮದವರಿಗೂ ಲಭ್ಯವಾಗಿವೆ. ನಾವು ಯಾವುದೇ ಒಂದು ಜಾತಿ, ಧರ್ಮದ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ತುಮಕೂರು ಜಿಲ್ಲೆಯ ಅಭಿವೃದ್ಧಿಗಾಗಿ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಅವರು ಮನವಿ ಪತ್ರವನ್ನು ನೀಡಿದ್ದಾರೆ. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಹಂತಹಂತವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ತುಮಕೂರು ನಗರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಕೆಎಸ್ಆರ್.ಟಿಸಿ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ದೇವರಾಜ ಅರಸು ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಬೆಂಗಳೂರಿನಂತೆ ತುಮಕೂರು ಜಿಲ್ಲೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 658 ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದ್ದೇವೆ. ಈ ಭಾಗದಲ್ಲಿ ಹೆಚ್ಚು ಉದ್ಯೋಗ ಸೃಷ್ಠಿಸುವುದು ನಮ್ಮ ಸಂಕಲ್ಪವಾಗಿದೆ ಎಂದರು.

ನಮ್ಮ ಗ್ಯಾರಂಟಿಗಳು ರಾಜ್ಯದ ಜನರ ಮನಗೆದ್ದಿದ್ದು, ಅವರ ಆರ್ಥಿಕ ಹೊರೆಯನ್ನು ಇಳಿಸಿದೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ನೀಡುತ್ತಿರುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದೇ ನಮ್ಮ ಗುರಿ ಎಂದು ಹೇಳಿದರು.+3

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular