Friday, November 22, 2024
Google search engine
Homeಮುಖಪುಟಕುರುಬರ ಸಂಘದ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ಪ್ರಕರಣ - ಕ್ರಮಕ್ಕೆ ಆಗ್ರಹ

ಕುರುಬರ ಸಂಘದ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ಪ್ರಕರಣ – ಕ್ರಮಕ್ಕೆ ಆಗ್ರಹ

ಮಂಡ್ಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ ಗಾಜುಗಳನ್ನು ದ್ವಂಸಗೊಳಿಸಿರುವುದು ರಾಜಕೀಯ ದುರುದ್ದೇಶಕ್ಕಾಗಿ ಸೃಷ್ಟಿಸಲಾಗಿದೆ ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಅನಂತನಾಯ್ಕ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶವು ಯಶಸ್ವಿಯಾಗಿರುವುದನ್ನು ಸಹಿಸಲಾಗದೆ ಆಸೂಯೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯಗಳನ್ನು ಸೃಷ್ಟಿಸಲಾಗುತ್ತದೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ಮುಖಂಡರು ಹಿಂದು ಧರ್ಮವನ್ನು ಗುತ್ತಿಗೆಗೆ ತೆಗೆದುಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ನಾಡಿನಲ್ಲಿ ಭಯ ಮತ್ತು ದಬ್ಬಾಳಿಕೆಯ ವಾತಾವರಣವನ್ನು ಸೃಷ್ಟಿಸಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂತಹ ದಬ್ಬಾಳಿಕೆ ಮತ್ತು ನೀಚ ಕೃತ್ಯಗಳನ್ನು ಸಮರ್ಥವಾಗಿ ಎದುರಿಸಲು ರಾಜ್ಯದ ಶೋಷಿತ ಸಮುದಾಯಗಳು ಶಕ್ತವಾಗಿವೆ. ಇಂತಹ ಪ್ರಚೋದನಾಕಾರಿ ಕೃತ್ಯಗಳಿಂದ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಕೂಡಲೇ ನಿಲ್ಲಿಸಬೇಕು ಎಂದು ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆ ಮುಂಚೆ ತಾವು ಧರ್ಮ-ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಮಾಡಿದ್ದೀರಿ. ಈಗ ಜಾತಿ ಜಾತಿಗಳ ನಡುವೆ ವಿಷ ಬೀಜವನ್ನು ಬಿತ್ತಿ ವೈರತ್ವವನ್ನು ಹುಟ್ಟಿಸುವ ಕೆಲಸಕ್ಕೆ ಕೈ ಹಾಕಿದ್ದೀರಿ. ಸಮಾಜದಲ್ಲಿ ಸಾಮರಸ್ಯದಿಂದ ಕೂಡಿ ಬಾಳ್ವೆಯನ್ನು ನಡೆಸುತ್ತಿರುವ ಎಲ್ಲಾ ಸಮುದಾಯಗಳನ್ನು ಒಡೆದು ಆಳುವ ನೀತಿಯನ್ನು ಈ ಕೂಡಲೇ ನಿಲ್ಲಿಸದಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಇಂತಹ ಕೃತ್ಯಕ್ಕೆ ಪ್ರಚೋದನೆ ನೀಡಿದ ಮತ್ತು ಕೃತ್ಯವನ್ನು ಎಸಗಿದ ಎಲ್ಲರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular