ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ‘ನನ್ನ ತೆರಿಗೆ ನನ್ನ ಹಕ್ಕು’ ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ ಎಂದು ಹೇಳಿದ್ದಾರೆ.
ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್ ಎಂದು ಸಲಹೆ ವಿಶ್ಲೇಷಿಸಿದ್ದಾರೆ.
ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.
ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದು ತಿಳಿಸಿದ್ದಾರೆ.